- ತಮ್ಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳನ್ನು ತಳ್ಳಿಹಾಕಿದ ಕಾಂಗ್ರೆಸ್ ಸಂಸದ ಅಕೊಯಿಜಮ್.
- ಬಿಜೆಪಿ ಇಂದಿಗೂ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ.
- ರಾಹುಲ್ ಗಾಂಧಿ ಪ್ರಸ್ತಾಪಿಸುತ್ತಿರುವ ವಿಚಾರಗಳಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ
- ಕಾಂಗ್ರೆಸ್ ವಿರುದ್ಧ ದ್ವಂದ್ವ ನೀತಿಯ ಆರೋಪ ಮಾಡಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್.
- ಜೆಎನ್‌ಯುನ 11 ವಿದ್ಯಾರ್ಥಿನಿಯರ ಆರೋಪವನ್ನು ಪ್ರಸ್ತಾಪಿಸಿದ ಬಿಜೆಪಿ.
ಮಣಿಪುರ: ತಮ್ಮ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಬಿಜೆಪಿ ಇಂದಿಗೂ ಸುಳ್ಳು ಹೇಳುವ ಮೂಲಕ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೊಯಿಜಮ್(Angomcha Bimol Akoijam) ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಡೆಯುತ್ತಿರುವುದು ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅಕೊಯಿಜಮ್, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸುತ್ತಿರುವ ಪ್ರಮುಖ ವಿಚಾರಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಈ ಆರೋಪಗಳನ್ನು ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ. ತಮ್ಮ ಧ್ವನಿಯನ್ನು ಅಡಗಿಸುವ ಉದ್ದೇಶದಿಂದ ಆರೋಪಗಳನ್ನು ದೊಡ್ಡದು ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ತಮಗೆ ಜವಾಬ್ದಾರಿ ನೀಡಿರುವುದೇ ತಮ್ಮ ಮೇಲಿನ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂಬ ವಿಶ್ವಾಸ ಪಕ್ಷಕ್ಕಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಛತ್ ಪೂಜೆ ಕಿಚ್ಚು: ಬಿಜೆಪಿಯ ವಿರುದ್ಧ ಆದಿತ್ಯ ಠಾಕ್ರೆ ಗರಂ! | Aaditya Thackeray
ಅಕೊಯಿಜಮ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಮಹಿಳೆಯರ ಗೌರವದ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) 11 ವಿದ್ಯಾರ್ಥಿನಿಯರು ಅಕೊಯಿಜಮ್ ವಿರುದ್ಧ ಗಂಭೀರ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ನೋಡಿ: ಸೌಜನ್ಯ ಪ್ರಕರಣದಲ್ಲಿ ಸಾಕ್ಷಿಗಳ ಕೊಲೆ! ಅಡ್ವೊಕೇಟ್ ಬಾಲನ್ ಆರೋಪ Janashakthi Media
ವಿಶ್ವವಿದ್ಯಾಲಯದಲ್ಲಿ ಶಿಸ್ತು ಕ್ರಮದ ಬಳಿಕ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಅಕೊಯಿಜಮ್ ಹೈಕೋರ್ಟ್ ಮೆಟ್ಟಿಲೇರಿದ್ದರು ಎಂದು ಸ್ವರಾಜ್ ತಿಳಿಸಿದ್ದಾರೆ. ಇಂತಹ ಗಂಭೀರ ಆರೋಪಗಳ ನಡುವೆಯೂ ಕಾಂಗ್ರೆಸ್ ನಾಯಕತ್ವ ಮೌನವಾಗಿರುವುದೇಕೆ ಮತ್ತು ಅವರಿಗೆ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ ನೀಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
