ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವೇತನ ಪರಿಷ್ಕರಣೆ, ಸೇವಾ ಭದ್ರತೆ ಸೇರಿದಂತೆ ಶ್ರೀನಿವಾಸಚಾರಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಇಂದು(ಜು.7) ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನೆಯನ್ನು ನಡೆಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಶ್ರೀನಿವಾಸಚಾರಿ ವರದಿ ಅನುಷ್ಠಾನ ಹಾಗೂ ವಾರ್ಷಿಕ ಮೌಲ್ಯಮಾಪನ ರದ್ದುಪಡಿಸುವಂತೆ ಕೋರಿ ನೌಕರರು “ಬೆಂಗಳೂರು ಚಲೋ” ಮೂಲಕ ಪುನಃ ಪ್ರತಿಭಟನೆಗೆ ಮುಂದಾಗಿದ್ದಾರೆ.
ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್.ವೈ. ಮಾತನಾಡಿ, ‘ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ ಅಧ್ಯಕ್ಷತೆಯ ಮಾನವ ಸಂಪನ್ಮೂಲ ಸಮಿತಿಯು 2020ರ ಡಿ.28ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿ ಅನುಷ್ಠಾನ ಹಾಗೂ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ವರದಿ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ
ಕೇಂದ್ರ ಸರ್ಕಾರದ ಅನುದಾನದ ಅಡಿ ನಡೆಯುವ ಕಾರ್ಯಕ್ರಮ ಆಗಿರುವುದರಿಂದ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಆರೋಗ್ಯ ಇಲಾಖೆಯಲ್ಲಿ 21 ಸಾವಿರ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ವಿಚಾರವಾಗಿ ಕೆಲವು ಸಿಬ್ಬಂದಿ ಹಲವು ಬೇಡಿಕೆಗಳ ಪರಿಹಾರಕ್ಕೆ ಹೋರಾಟಕ್ಕೆ ಇಳಿದಿದ್ದಾರೆ. ಪ್ರತಿ ಸಿಬ್ಬಂದಿ ಮೇಲೆ ಕೂಡಾ ಸರ್ಕಾರಕ್ಕೆ ಗೌರವ ಇದೆ. ಕೋವಿಡ್ ಸಂದರ್ಭದಲ್ಲಿ ಕೂಡಾ ಎಲ್ಲಾ ತ್ಯಾಗ ಮನೋಭಾವದಿಂದ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ನಮ್ಮ ಹಂತದಲ್ಲಿ ಏನೆಲ್ಲಾ ಸಾಧ್ಯತೆಗಳಿವೆಯೋ ಅವುಗಳ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಇನ್ನೂ ಕೆಲವು ಬೇಡಿಕೆಗಳ ಬಗ್ಗೆ ಆರ್ಥಿಕ ಇಲಾಖೆ ಜೊತೆ ಮಾತನಾಡಬೇಕಿದೆ. ನಾನು ಫ್ರೀಡಂ ಪಾರ್ಕ್ ಬಳಿ ಹೋಗಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ, ಎಷ್ಟು ಕಾಲದಿಂದ ಕಾರ್ಯ ನಿರ್ವಹಣೆ ಮಾಡ್ತಿದಾರೆ ಈ ಎಲ್ಲದರ ಬಗ್ಗೆಯೂ ಚರ್ಚೆ ಮಾಡುವೆ ಎಂದರು.