ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ.
ಪರೀಕ್ಷೆ ನಡೆಯುವ ಈ ಎರಡೂ ದಿನ ಬೆಳಗ್ಗೆ 9 ರಿಂದ ಮಧ್ಯಾಹ್ನ 3.50ರವರೆಗೆ ಪರೀಕ್ಷಾ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಎರಡೂ ದಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಪೋಟೋಕಾಪಿ ಕೇಂದ್ರಗಳನ್ನು ಮುಚ್ಚಬೇಕಿದೆ.
ಏತನ್ಮಧ್ಯೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜಿನಲ್ಲಿ ಸಿಇಟಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ,
ಕಂಠೀರವ ಕ್ರೀಡಾಂಗಣದಲ್ಲಿಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕ್ರೀಡಾಂಗಣದ ಬಳಿಯೇ ಪರೀಕ್ಷಾ ಕೇಂದ್ರ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.
ಮಲ್ಯ ಆಸ್ಪತ್ರೆ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಭಾರತೀಯ ಪಿಯು ಕಾಲೇಜಿನಲ್ಲಿ ಸಿಇಟಿಗೆ ಹಾಜರಾಗುವ ವಿದ್ಯಾರ್ಥಿಗಳು ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ, ಈ ಕೇಂದ್ರಕ್ಕೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಿಗ್ಗೆ 8.30ರ ಒಳೆಗೆ ಪರೀಕ್ಷಾ ಕೇಂದ್ರ ತಲುಪುವಂತೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಗಳು ಎದುರಾಗಿದ್ದೇ ಆದರೆ, ಸಹಾಯಕ್ಕಾಗಿ 9480801809 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.