ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಪ್ರಕರಣದಲ್ಲಿ ಲೋಕಾಯುಕ್ತ ವರದಿ ಆಧರಿಸಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಅನುಮತಿ ಕೋರಿ ಎಸ್ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಏಕಾಏಕಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಈ ಹಿಂದಿನ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಈ ಬೆಳವಣಿಗೆ ಕುತೂಹಲ ಮೂಡಿಸಿದೆ.
ಹೆಚ್ಡಿ ಕುಮಾರಸ್ವಾಮಿ 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್ಎಸ್ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದರು. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ.
ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ನ್ಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ 2023 ನಂಬರ್ 21ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.
ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಆರೋಪಗಳ ಕುರಿತು ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29 ರಂದು ಎಸ್ಐಟಿಗೆ ಪತ್ರ ಬರೆದಿದ್ದರು. ಸ್ಪಷ್ಟನೆ ಜೊತೆಗೆ ಉತ್ತರಗಳೊಂದಿಗೆ ಎಸ್ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆದಿದೆ. ಅಲ್ಲದೇ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.