ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಯಚೂರಿನಲ್ಲಿ ಮೂರು ಜನರು ಕಲುಷಿತ ನೀರು ಕುಡಿದು ಮೃತಪಟ್ಟಿರುವುದನ್ನು ಸಂಪೂರ್ಣವಾಗಿ ತನಿಖೆ ಮಾಡಿ ವರದಿ ನೀಡಲು ಕೆಡಬ್ಲ್ಯೂಎಸ್‌ಎಸ್‌ಬಿ ಇಂಜಿನಿಯರ್ ಅವರಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗೆ ಎಲ್ಲಾ ವಾರ್ಡ್‌ಗಳ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲು ಸೂಚಿಸಲಾಗಿದೆ. ಅಧಿಕಾರಿಗಳ ಲೋಪದೋಷಗಳ ಬಗ್ಗೆ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುವುದು. ತಾಂತ್ರಿಕ ಸಹಾಯ ಪಡೆದುಕೊಂಡು ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋವಿಡ್ ನಿರ್ವಹಣೆಯ ಬಗ್ಗೆ ಹಾಗೂ ಜಿಲ್ಲೆಗಳಲ್ಲಿ ಸ್ಥಿತಿಗತಿಯ ಬಗ್ಗೆ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಸಭೆ ಕರೆದು ವರದಿ ಕೊಡುತ್ತಾರೆ. ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೀರ್ ಪಾಷಾ ದರ್ಗಾದ ಬಗ್ಗೆ ಸೃಷ್ಟಿಯಾದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜನರು ಯಾವುದೇ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ. ಎಲ್ಲ ಕ್ರಮಕೈಗೊಳ್ಳಾಗಿದೆ. ಸ್ವಾಮೀಜಿಗಳು ಮನವಿ ಕೊಟ್ಟಿದ್ದಾರೆ. ಕೆಲವು ದಾಖಲೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಪುರಾತತ್ವ ಇಲಾಖೆ ಪರಿಶೀಲನೆ ಮಾಡುತ್ತದೆ ಎಂದರು.