ನವದೆಹಲಿ, ಜ.12 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶದವರೆಗೂ ಈ ಕಾಯ್ದೆಗಳನ್ನು ಅನುಷ್ಠಾನ ಮಾಡದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಸಮಸ್ಯೆ ಪರಿಹರಿಸಲು 5 ಜನರ ಸಮಿತಿ ರಚಿಸಿ ರೈತರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವಂತೆ ಕೇಂದ್ರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ
ನೂತನ ಕೃಷಿ ಕಾಯ್ದೆಯ ಅನುಷ್ಠಾನ ಮತ್ತು ಜನವರಿ 26ರಂದು ರೈತರು ದೆಹಲಿಗೆ ಟ್ರ್ಯಾಕ್ಟರ್ ಜಾಥಾ ಆಯೋಜಿಸಿರುವುದರಿಂದ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ.
ಇದಕ್ಕೂ ಮುನ್ನ ವಿಚಾರಣೆ ಸಂದರ್ಭದಲ್ಲಿ ಕೃಷಿ ಕಾಯ್ದೆಗಳನ್ನು ಅನುಷ್ಠಾನ ಮಾಡದಂತೆ ತಾತ್ಕಾಲಿಕವಾಗಿ ತಡೆಹಿಡಿಯಬಹುದು ಆದರೆ ಅದು ಶಾಶ್ವತವಾಗಿ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.