ಬೆಂಗಳೂರು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.
ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಾಗಿರುವ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
“ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದ್ದು, ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಆರ್ಥಿಕ ಪ್ರಗತಿಗೆ ನೆರವಾಗಿದೆ. ಬೆಂಗಳೂರು ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ಪರಿಣಾಮ, ನಗರದ ಜನಸಂಖ್ಯೆ 1.50 ಕೋಟಿ ಸನಿಹದಲ್ಲಿದೆ. ಹೀಗಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಮಾಡಿ ಬೆಂಗಳೂರನ್ನು ದೇಶದ ಸಿಲಿಕಾನ್ ವ್ಯಾಲಿ ಎಂಬ ಹಿರಿಮೆ ಉಳಿಸಿಕೊಳ್ಳಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದ್ದು, ಮುಂಬರುವ ಬಜೆಟ್ ನಲ್ಲಿ ಈ ಯೋಜನೆಗಳಿಗೆ ಪೂರಕವಾಗಿ ಅನುದಾನ ನೀಡಬೇಕು” ಎಂದು ತಿಳಿಸಿದ್ದಾರೆ.