ಕೊಪ್ಪಳ: ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದ್ದು, ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಕೊಪ್ಪಳದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಈ ಬಗ್ಗೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.
ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಅವರು ಹೇಳಿದರು
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನ: ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.