ಬೆಂಗಳೂರು: ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯಾಘಾತಕ್ಕೆ ಸಂಬಂಧಪಟ್ಟಂತೆ ನೀಡಲಾಗುವ ಎಲ್ಲಾ ರೀತಿಯ ಚಿಕಿತ್ಸೆ ನೀಡುತ್ತಿದ್ದೇವೆ. ಸ್ಥಿತಿ ಗಂಭೀರವಾಗಿದೆ. ಸದ್ಯ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಕ್ರಂ ಆಸ್ಪತ್ರೆ ವೈದ್ಯರು ಹೇಳಿದ್ದಾರೆ
ನಟ ಪುನೀತ್ ರಾಜ್ಕುಮಾರ್ಗೆ ಹೃದಯಾಘಾತವಾಗಿದ್ದು, ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಂ ಆಸ್ಪತ್ರೆ ಕರೆತರಲಾಯಿತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲವಲವಿಕೆಯಿಂದ ಇದ್ದ ಅವರು ಈಗ ವಿಕ್ರಂ ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.
ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿ ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಆರ್.ಅಶೋಕ್, ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇನ್ನು ನಟರಾದ ಯಶ್, ರವಿಚಂದ್ರನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.
ಅಭಿಮಾನಿಗಳು ಸಾಗರದಂತೆ ಆಸ್ಪತ್ರೆಯತ್ತ ಆಗಮಿಸುತ್ತಿದ್ದು, ಕಣ್ಣೀರಿನಲ್ಲಿ ಮುಳುಗಿದ್ದಾರೆ. ಆಸ್ಪತ್ರೆ ಸುತ್ತಮುತ್ತ ಇರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.