ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂವಿಧಾನದ 163ರ ವಿಧಿ ಅನ್ವಯ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಕುರಿತು ಬಾಕಿ ಇರುವ ದೂರುಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ಸಲಹೆ ನೀಡಲು ನಿರ್ಧರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯ ಮಾಜಿ ಸಚಿವರಾದ ಸಚಿವೆ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಸಲಹೆ ನೀಡಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ದೂರು ಬಂದ ಕೆಲವೇ ಗಂಟೆಗಳಲ್ಲಿ ಶೋಕಾಸ್ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವ ಸಂಪುಟದ ತೀರ್ಮಾನ ನಡುವೆಯೂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ. ಪಾಟೀಲ್, ಬಾಕಿ ಇರುವ ಪ್ರಾಸಿಕ್ಯೂಷನ್ ವಿಚಾರಗಳಲ್ಲಿ ಅನುಮತಿ ನೀಡುವ ಕುರಿತು ತೀರ್ಮಾನ ಕೈಗೊಳ್ಳಿ ಎಂದು ಸಂಪುಟ ಸಲಹೆ ನೀಡಲಿದೆ ಎಂದರು.
ಆಗಸ್ಟ್ 1ರಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಸಲಹೆಗೆ ವಿರುದ್ಧವಾಗಿ ತೀರ್ಮಾನ ಕೈಗೊಂಡು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಳೆದ ಒಂದೂವರೆ ವರ್ಷಕ್ಕೂ ಅಧಿಕ ಸಮಯದಿಂದ ಬಾಕಿ ಉಳಿಸಿಕೊಂಡಿರುವ ದೂರುಗಳನ್ನು ಪ್ರಾಸಿಕ್ಯೂಷನ್ ಗೆ ನೀಡಬೇಕು ಎಂದು ಸಲಹೆ ನೀಡಲಾಗುವುದು ಎಂದರು.