ಬೆಳಗಾವಿ: ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆರ್ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದರು.
ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಬೆಳಗಾವಿ | ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಸಿ ಎಂ ಸಿದ್ದರಾಮಯ್ಯ ಖಾದಿ ರಾಷ್ಟ್ರೀಯ ಧ್ವಜ ಅನಾವರಣ
ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‍ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕಲ್ ಬಸ್‍ಗಳ ಹಂಚಿಕೆಗೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್‍ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡ ವಿಧಿಸಲಾಗಿದೆ ಎಂದರು.
ಬಿಎಂಟಿಸಿಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1,221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ. 2023-24 ರಿಂದ 2025 ಸೆಪ್ಟಂಬರ್ ವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನಿತರ ದೋಷದಿಂದ 2049 ಬಾರಿ ಅಪಘಾತಕ್ಕೀಡಾಗಿರುತ್ತವೆ. 2023 ಜನವರಿಯಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳಿಗೆ ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಕಾರ್ಯಾಚರಣೆಗೆ ನೀಡಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದರು.
ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ 2025ರ ಅಕ್ಟೋಬರ್ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ನೋಡಿ : ಡ್ರಗ್ಸ್ ಮಾಫಿಯಾ :ಯುವಜನ ಟಾರ್ಗೆಟ್ ಯಾಕೆ? ಪೊಲೀಸರ ಬಲೆಗೆ ಬೀಳದ ಪೆಡ್ಲರ್‌ಗಳು Janashakthi Media
