ಶಿವಮೊಗ್ಗ : ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯುವ ನಿಧಿಗೆ ಶುಕ್ರವಾರ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಶಿವಮೊಗ್ಗದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟವೇ ನೆರೆದಿತ್ತು. ವಿವೇಕಾನಂದರ ಜನ್ಮದಿನವಾದ ರಾಷ್ಟ್ರೀಯ ಯುವದಿನದಂದೇ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ಸಿಗ್ತಿರೋದು ವಿಶೇಷವಾಗಿದೆ. ಕಾರ್ಯಕ್ರಮದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.
ಬಳಿಕ ಮಾತನಾಡಿದ ಅವರು,ಶಿವಮೊಗ್ಗಕ್ಕೆ ಇಂದು ಐತಿಹಾಸಿಕ ದಿನ. ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿಗೆ ತಂದಿದ್ದೇವೆ. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು ಎಂದರು. ವಿವೇಕಾನಂದರ ಆದರ್ಶಗಳನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದನ್ನು ಓದಿ : ಹರೇಕಳ ಗ್ರಾಮ ಪಂಚಾಯತ್ ಚಲೋ | ಸಿಪಿಐ(ಎಂ) ನೇತೃತ್ವದಲ್ಲಿ ಮನೆ ನಿವೇಶನ ರಹಿತರ ಹೋರಾಟ
ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದರು.
ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2000 ರೂ ತಲುಪಿಸುತ್ತಿದ್ದೇವೆ. ಇಂಥಾ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದೇ ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದರು.
ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದನ್ನು ನೋಡಿ :ಕಲಾಸಕ್ತರ ಕಣ್ಮನ ತಣಿಸಿದ ಚಿತ್ರಸಂತೆ : ಹರಿದು ಬಂದ ಕಲಾ ಪ್ರೇಮಿಗಳ ಸಾಗರ Janashakthi Media