– ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದಿದ್ದ ಸಂಸದ ಅನಂತ್ ಕುಮಾರ್
ಬೆಂಗಳೂರು: ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾಂಗ್ರೆಸ್ ಟ್ವೀಟ್: ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ. ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಬರೆದುಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಅನಂತಕುಮಾರ್ ಹೇಳಿದ್ದೇನು?: ಬಿಎಸ್‍ಎನ್‍ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್‍ಎನ್‍ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 ಸಾವಿರ ಅಧಿಕಾರಿಗಳನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸುತ್ತೇವೆ. ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದರು.
ಎಲ್ಲ ಸೌಕರ್ಯಗಳಿದ್ದರೂ ಸಂಸ್ಥೆಯ ನೌಕರರು ಕೆಲಸ ಮಾಡುವುದಿಲ್ಲ, ಮುಂದಿನ ದಿನಗಳಲ್ಲಿ ಬಿಎಸ್‍ಎನ್‍ಎಲ್ ಸಂಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದಿದ್ದಾರೆ. ಬಿಎಸ್‍ಎನ್‍ಎಲ್ ಎಂಬ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರದ ಅಧೀನದಲ್ಲಿರುವ ಬಿಎಸ್‍ಎನ್‍ಎಲ್ ಸಂಸ್ಥೆ ವಿರುದ್ಧ ಹರಿಹಾಯ್ದರು.