ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ. ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಬುಧವಾರ ಸಂಜೆ 5 ಗಂಟೆಗೆ ಹಲವು ಸಾಫ್ಟ್ ವೇರ್ ಕಂಪನಿಗಳ ಮುಖ್ಯಸ್ಥರ/ಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಸಭೆ ನಡೆಯಲಿದ್ದು, ಇನ್ಫೋಸಿಸ್, ವಿಪ್ರೋ, ನಾಸ್ಕಾಮ್, ಇಂಟೆಲ್, ಟಿಸಿಎಸ್, ಫಿಲಿಪ್ಸ್, ಸೋನಾಟಾ ಸಾಫ್ಟ್‌ವೇರ್ ಸೇರಿದಂತೆ ಇತರ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಮತ್ತು ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಲಾಗುವುದು. ಜೊತೆಗೆ, ನಗರದ ಸಮಸ್ಯೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಪಿಪಿಟಿ ಪ್ರಸ್ತುತ ಪಡಿಸಲಿದ್ದಾರೆ. ಕಂಪನಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.