ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ʻ ನ್ಯಾಯಾಲಯದ ತೀರ್ಪು ಏನೇ ಇರಲಿ, ನಮ್ಮ ಮಕ್ಕಳ ಭವಿಷ್ಯದ ಪ್ರಶ್ನೆಯಿದೆ ಮತ್ತು ಶಿಕ್ಷಣದ ಪ್ರಶ್ನೆಯಿದೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯ ಯಾವುದೂ ಇಲ್ಲ. ಹೈಕೋರ್ಟ್ ತ್ರಿಸದಸ್ಯ ಪೀಠದ ಆದೇಶ ನಾವೆಲ್ಲರೂ ಪಾಲಿಸಬೇಕುʼ ಎಂದು ಹೇಳಿದ್ದಾರೆ.
ʻಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು, ನ್ಯಾಯಾಲಯದ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಎಲ್ಲ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು, ಪೋಷಕರ ಜೊತೆ ಮನವಿ ಮಾಡುತ್ತೇನೆ’ ಎಂದು ತಿಳಿಸಿದರು.
‘ತೀರ್ಪು ಸ್ವಾಗತಾರ್ಹ. ಕಾನೂನು ಸುವ್ಯವಸ್ಥೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಇಲ್ಲವಾದರೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಾಲೆ, ಕಾಲೇಜುಗಳಲ್ಲಿ ಹಿಜಾಬ್‌ಗೆ ವಿಧಿಸಿದ ನಿರ್ಬಂಧ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮನವಿಗಳನ್ನು ರಾಜ್ಯ ಹೈಕೋರ್ಟ್ ಇಂದು(ಮಾ.15) ವಜಾಗೊಳಿಸಿತು. ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ನ್ಯಾಯಾಲಯವು ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿತು.