ಮೈಸೂರು: 10 ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಯಾರ್ಯಾರು ಬರಲಿದ್ದಾರೆ ಎಂಬುವುದನ್ನು ಈಗಾಗಲೇ ಹೇಳಲು ಸಾಧ್ಯವಿಲ್ಲ,ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಹೇಳಿದರು.
ಇದನ್ನೂ ಓದಿ:ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ದ ಭ್ರಷ್ಟಾಚಾರ ಆರೋಪ ಸಿಐಡಿ ತನಿಖೆ
ಕಳೆದೆರಡು ದಿನದಿಂದ ರಾಜ್ಯದಲ್ಲಿ ಆಪರೇಷನ್ ಬಗ್ಗೆ ಚರ್ಚೆಯಾಗುತ್ತಲೆ ಇದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಮುಖ್ಯ ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಕಾಂಗ್ರೆಸ್‌ಗೆ ಘರ್ ವಾಪ್ಸಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹುಟ್ಟುಹಾಕಲಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂತಹದೊಂದು ಘರ್ ವಾಪ್ಸಿ ಆರಂಭವಾಗಲಿದೆ. ಕಾಂಗ್ರೆಸ್‌ನ ಉನ್ನತ ಮೂಲಗಳ ಪ್ರಕಾರ, ಈ ಘರ್ ವಾಪ್ಸಿಯ ಮೊದಲ ಹಂತ ಶೀಘ್ರ ನಡೆಯುವ ಸಾಧ್ಯತೆಯಿದ್ದು, ಬೆಂಗಳೂರಿನ ಒಬ್ಬ ಶಾಸಕರು ಬಿಜೆಪಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇದಾದ ನಂತರ ಲೋಕಸಭೆ ಚುನಾವಣೆ ವೇಳೆಗೆ ಉಳಿದ ನಾಲ್ಕೈದು ಶಾಸಕರು ಹಂತ ಹಂತವಾಗಿ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ವಿಧಾನಸೌಧದಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ನಾಯಕತ್ವ ಸದರಿ ಶಾಸಕರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದೆ. ಹೈಕಮಾಂಡ್ ಸಹ ಈ ಶಾಸಕರ ಸೇರ್ಪಡೆಗೆ ತಾತ್ವಿಕ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಆದರೆ, ಈ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆರವಾದರೆ ಅದಕ್ಕೆ ಬದಲಾಗಿ ಈ ಶಾಸಕರಿಗೆ ಸರ್ಕಾರದಲ್ಲಿ ಯಾವ ಸ್ಥಾನ ಮಾನ ದೊರೆಯುತ್ತದೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಈ ವಿಚಾರದ ಬಗ್ಗೆ ಶಾಸಕರು ಹಾಗೂ ಕಾಂಗ್ರೆಸ್ ನಾಯಕತ್ವದ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಬೇಕಿದೆ. ಈ ವಿಚಾರ ಇತ್ಯರ್ಥವಾದರೆ ಶಾಸಕರು ಕಾಂಗ್ರೆಸ್ ಸೇರ್ಪಡೆ ದಿನಾಂಕ ನಿರ್ಧಾರವಾಗುತ್ತದೆ ಎನ್ನುತ್ತವೆ ಮೂಲಗಳು.