ಬೆಂಗಳೂರು: ಕರ್ನಾಟಕ ಸರ್ಕಾರ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಬೇಕೆಂದು ನೂರಾರು ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.
ಇದನ್ನು ಓದಿ: ಶಿಕ್ಷಣ ಇಲಾಖೆ ಎಡವಟ್ಟು; ಶಿಕ್ಷಕರ ಆರ್ಹತಾ ಪರೀಕ್ಷಾ ಕೇಂದ್ರ ಸಿಗದೆ ಕಂಗಾಲಾಗಿರುವ ಅಭ್ಯರ್ಥಿಗಳು
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈಗ ಪ್ರಕಟಗೊಂಡಿರುವ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ.
ಶಿಕ್ಷಕ ಆಕಾಂಕ್ಷಿ ಅಭ್ಯರ್ಥಿಗಳ ಅರ್ಜಿಯ ಪರವಾಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ಈಗ ಸರ್ಕಾರ ಬಿಡುಗಡೆ ಮಾಡಿರುವ ತಾತ್ಕಾಲಿಕ ಆಯ್ಕೆಪಟ್ಟಿ ಕಾನೂನು ಬಾಹಿರವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ವಾದವನ್ನು ಆಲಿಸಿದ ಏಕಸದಸ್ಯ ಪೀಠವು ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿ ಆದೇಶ ನೀಡಿದೆ.
ಇದನ್ನು ಓದಿ: ಪ್ರಾಥಮಿಕ ಶಿಕ್ಷಕರ ನೇಮಕಾತಿ: ಜಾತಿ-ಆದಾಯ ಪ್ರಮಾಣ ಪತ್ರ ಗೊಂದಲದಿಂದ 2 ಸಾವಿರ ಮಹಿಳೆಯರಿಗೆ ಉದ್ಯೋಗವಿಲ್ಲ!
ಅಭ್ಯರ್ಥಿಗಳ ಆಯ್ಕೆ ವೇಳೆ ಶಿಕ್ಷಣ ಇಲಾಖೆ, ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿದ್ದು, ಇದರಿಂದ ಹಲವು ಅಭ್ಯರ್ಥಿಗಳು ಆಯ್ಕೆಯಾಗದೇ ಉಳಿದುಕೊಂಡಿದ್ದರು. ಇದನ್ನು ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.
ಸರ್ಕಾರ ಹೊಡಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿ ತಕರಾರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಿಂದೆ ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರ‍್ಯಾಂಕ್ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ಆದರೆ, ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 2022ರ ನವೆಂಬರ್ 18ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅರ್ಜಿದಾರರು ಅದರಲ್ಲಿ ಸ್ಥಾನ ಪಡೆದಿರಲಿಲ್ಲ. ಇದರಿಂದ ಅರ್ಜಿದಾರರು ತಾತ್ಕಾಲಿಕ ಪಟ್ಟಿಯನ್ನು ಪ್ರಶ್ನಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ