ಚುನಾವಣೆಯಲ್ಲಿ 150 ಸ್ಥಾನ ಗೆಲುವಿನ ಗುರಿಗೆ ಮುಂದಾಗಿ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಅವರಿಗೆ ಎಐಸಿಸಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ 150ಕ್ಕೂ ಅಧಿಕ ವಿಧಾನಸಭಾ ಸ್ಥಾನಗಳನ್ನು ಗೆಲುವು ಸಾಧಿಸಲು ಗುರಿಯೊಂದಿಗೆ ಮುಂದಾಗಿ, ಚುನಾವಣೆಯ ಬಳಿಕ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಎಂದು ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರಿಗೆ ಎಐಸಿಸಿ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನೆನ್ನೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಧಿರ್ಘವಾಗಿ ಚರ್ಚೆ ನಡೆಸಿದ್ದಾರೆ.

ಇದನ್ನು ಓದಿ: ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಗೆ ಸೂಚನೆ ನೀಡಿದ ರಾಹುಲ್‌ ಗಾಂಧಿ

ಸಭೆಯ ಬಳಿಕ ಸಿದ್ದರಾಮಯ್ಯ  ಹಾಗೂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ  ಪಕ್ಷದ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಬ್ಬರು ಒಟ್ಟಿಗೆ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. ಹಾಗೂ  ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ ಸ್ಪಷ್ಟಪಡಿಸಿದರು.

ಮುಂದಿನ ಕೆಲವು ವಾರಗಳಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಪುನರ್ ರಚನೆ ಆಗುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ತಿಳಿಸಿದೆ.

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಇರುವುದನ್ನು ಗಮನಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಇಬ್ಬರಲ್ಲಿ ಇರುವ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ದೆಹಲಿಗೆ ಕರೆಸಿಕೊಂಡಿತ್ತು.

ಸಾಮೂಹಿಕ ನಾಯಕತ್ವದಲ್ಲಿ ವಿಧಾನಸಭಾ ಚುನಾವಣೆಯಲ್ಲಿ  ಹೋರಾಡುವಂತೆ ರಾಹುಲ್  ಅವರು ಶಿವಕುಮಾರ್ ಹಾಗೂ  ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದು, ತಮ್ಮನ್ನು ತಾವು  ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆಂದು ವರದಿಯಾಗಿದೆ.

“ರಾಹುಲ್ ಗಾಂಧಿ ನಮಗೆ ಕೆಲವು ಸಲಹೆಗಳನ್ನು ನೀಡಿದರು. ಅದನ್ನು ನಾವು ಪ್ರಾಮಾಣಿಕವಾಗಿ ಅನುಸರಿಸುತ್ತೇವೆ. ನಿಸ್ಸಂಶಯವಾಗಿ ಸಣ್ಣ ಭಿನ್ನಾಭಿಪ್ರಾಯಗಳಿವೆ. ಕಾಂಗ್ರೆಸ್ ಬಲವಾದ ಆಂತರಿಕ ಪ್ರಜಾಪ್ರಭುತ್ವವನ್ನು ಹೊಂದಿದೆ. ಭಿನ್ನಾಭಿಪ್ರಾಯವನ್ನು ಹೊಂದಿರುವುದು ಪ್ರಜಾಪ್ರಭುತ್ವದ ಸ್ಥಾಪನೆಯ ಭಾಗವಾಗಿದೆ. ಆದರೆ ನಾವು ಒಗ್ಗಟ್ಟಿನಿಂದ ಇರುತ್ತೇವೆ”ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಂಘಟಿತ ನಾಯಕತ್ವದಲ್ಲಿ ಕಾಂಗ್ರೆಸ್ ಮುಂದಿನ ಚುನಾವಣೆಗೆ ಹೋಗಲಿದೆ ಎಂದು ಶಿವಕುಮಾರ್ ಹೇಳಿದರು. “ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಇದು ಒಂದು ಸಿದ್ಧಾಂತವನ್ನು ಹೊಂದಿದೆ. ಇಲ್ಲಿ ಸಾಮೂಹಿಕ ನಾಯಕತ್ವ ಮುಖ್ಯ. ವೈಯಕ್ತಿಕ ನಾಯಕತ್ವಕ್ಕೆ ಯಾವುದೇ ಅವಕಾಶವಿಲ್ಲ. ನಮ್ಮಲ್ಲಿ ಒಂದು ಡಝನ್ ನಾಯಕರು ಇದ್ದಾರೆ ಹಾಗೂ  ಪಕ್ಷವು ಅವರ ಅಡಿಯಲ್ಲಿ ಚುನಾವಣೆಗೆ ಹೋಗುತ್ತದೆ ”ಎಂದು ಅವರು ಹೇಳಿದರು.

ಇಂದು ಎಐಸಿಸಿ ವರಿಷ್ಠರನ್ನು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಭೇಟಿ ಮಾಡಿದರು. ಕಾಂಗ್ರೆಸ್‌ನ ಹಿರಿಯ ಮುಖಂಡರು ಹಾಗೂ ರಾಜ್ಯಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಅವರನ್ನು ಭೇಟಿ ಮಾಡಿ ಶುಭಕೋರಿದರು.

Donate Janashakthi Media

Leave a Reply

Your email address will not be published. Required fields are marked *