ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿನ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಅಕ್ಟೋಬರ್ 16ರಂದು ನಡೆಯಲಿರುವ ‘ಲೆಹ್ರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸಿ) ಮೆರವಣಿಗೆಯ ಹಿನ್ನೆಲೆಯಲ್ಲಿ ಸುಮಾರು 25 ಸಾವಿರ ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿಯಲ್ಲಿ
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಈ ಪ್ರತಿಭಟನೆಗೆ ಕರೆ ನೀಡಿದ್ದು, ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಎಸ್ಎಫ್ಐ, ಎಐಎಸ್ಎ, ಎಐಎಸ್ಎಫ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ. ನಾಗರಿಕ ಹಕ್ಕುಗಳ ಹೋರಾಟಗಾರರು ಮತ್ತು ಸಾಮಾಜಿಕ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೆಹಲಿಯಲ್ಲಿ
ಇದನ್ನೂ ಓದಿ : ಗ್ಯಾನೇಶ್ ಕುಮಾರ್ ಮೋದಿ ಅವರಿಗೆ ಅಷ್ಟೊಂದು ಮುಖ್ಯವೇಕೆ?”: ಅಭಿಜೀತ್ ದಿಪ್ಕೆ ಪ್ರಶ್ನೆ
ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ ಮತ್ತು ರಾಜೀವ್ ಚೌಕ್ ಮೆಟ್ರೊ ನಿಲ್ದಾಣದ ಬಳಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೆಂಟ್ರಲ್ ಪಾರ್ಕ್ ಅನ್ನು ಅಕ್ಟೋಬರ್ 16 ಮತ್ತು 17ರಂದು ಸಾರ್ವಜನಿಕರಿಗೆ ಮುಚ್ಚಲಾಗಿದೆ. ಕನ್ನಾಟ್ ಪ್ಲೇಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ನಿರ್ಬಂಧಾಜ್ಞೆಗಳನ್ನೂ ಜಾರಿಗೊಳಿಸಲಾಗಿದೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಜನರು ಸೆಂಟ್ರಲ್ ಪಾರ್ಕ್ಗೆ ಆಗಮಿಸದಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ಸಂಚಾರವನ್ನು ನಿಯಂತ್ರಿಸಲು ಪ್ರಮುಖ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಸುಮಾರು 16 ಬಂಧನ ವಾಹನಗಳನ್ನು ಸಿದ್ಧವಾಗಿರಿಸಲಾಗಿದೆ. ಪರಿಸ್ಥಿತಿಯನ್ನು ಅವಲಂಬಿಸಿ ಮೆಟ್ರೊ ಸಂಚಾರದ ಮೇಲೆಯೂ ನಿರ್ಬಂಧ ವಿಧಿಸುವ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಸಿಜೆಪಿ ಹೋರಾಟ ನಡೆಸುತ್ತಿದೆ. ಇತ್ತೀಚೆಗೆ ಸಂಘಟನೆಯ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆಗೆ ಹೊಸ ಕರೆ ನೀಡಲಾಗಿದೆ.
ಪ್ರತಿಭಟನೆಯನ್ನು ತಡೆಯುವ ಉದ್ದೇಶದಿಂದ ಭದ್ರತಾ ವ್ಯವಸ್ಥೆ ಬಿಗಿಗೊಳಿಸಿರುವ ಕ್ರಮಗಳು ರಾಜಕೀಯ ಮತ್ತು ನಾಗರಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಮತ್ತೊಂದೆಡೆ, ಕನ್ನಾಟ್ ಪ್ಲೇಸ್ನ ವ್ಯಾಪಾರಿಗಳು ಹಬ್ಬದ ಋತುವಿನಲ್ಲಿ ಪ್ರತಿಭಟನೆ ಮತ್ತು ನಿರ್ಬಂಧಗಳಿಂದ ವ್ಯಾಪಾರಕ್ಕೆ ಹಾನಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಹಕ್ಕು ಮತ್ತು ಸಾರ್ವಜನಿಕರ ದೈನಂದಿನ ಚಟುವಟಿಕೆಗಳ ನಡುವಿನ ಸಮತೋಲನ ಕಾಯ್ದುಕೊಳ್ಳಬೇಕೆಂದು ವ್ಯಾಪಾರ ಸಂಘಟನೆಗಳು ಒತ್ತಾಯಿಸಿವೆ.
ಇದನ್ನೂ ನೋಡಿ : SIR ಅಕ್ರಮ: ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿ ಹೆಗಲು ಮುಟ್ಕೊಳೋದ್ಯಾಕೆ? Janashakthi Media
