3 ವಾರದೊಳಗೆ ಗ್ರಾಪಂ ಚುನಾವಣೆ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ

 

ಬೆಂಗಳೂರು: ರಾಜ್ಯದ 6,000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೂರು ವಾರಗಳೊಳಗೆ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ಪೀಠ, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ  ಸೂಚಿಸಿತು.

ಮೂರು ವಾರದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ರಾಜ್ಯ

ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಚುನಾವಣೆಗೆ ಸರ್ಕಾರ ಸಿದ್ಧವಾಗಿದೆ.

 ಕೆ.ಎಸ್. ಈಶ್ವರಪ್ಪ,

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕಿದ್ದರೆ ಚುನಾವಣಾ ಆಯೋಗವು ರಾಜ್ಯಪಾಲರಿಗೆ ಈ ಸಂಬಂಧ ಮನವಿ ಸಲ್ಲಿಸಬೇಕು. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರಕ್ಕೆ ಆಯೋಗವು ಮನವಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

‘ವಿಶೇಷ ಸಂದರ್ಭಗಳಲ್ಲಿ ಚುನಾವಣೆಗಳನ್ನು ಮುಂದೂಡುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ಹೊಂದಿದೆ. ಯಾವುದೇ ಸನ್ನಿವೇಶದಲ್ಲಿ ವಿಶೇಷ ಸಂದರ್ಭ ಉದ್ಭವಿಸಿದೆಯೇ ಇಲ್ಲವೇ ಎಂಬುದನ್ನು ಚುನಾವಣಾ ಆಯೋಗವೇ ಸ್ವತಂತ್ರವಾಗಿ ನಿರ್ಧರಿಸಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನನ್ನೂ ಹೇಳುವಂತಿಲ್ಲ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆಯೂ ಇಲ್ಲ’ ಎಂದೂ ವಿಭಾಗೀಯ ಪೀಠ ತಿಳಿಸಿದೆ.

ಕೋವಿಡ್‌ ಪಿಡುಗಿನಿಂದ ಉದ್ಭವಿಸಿರುವ ಸನ್ನಿವೇಶವನ್ನು ಆಧರಿಸಿ ಗ್ರಾಮ ಪಂಚಾಯಿತಿಗಳ ಚುನಾವಣೆಗಳನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿದ್ದ ಆಕ್ಷೇಪಣಾ ಹೇಳಿಕೆಯಲ್ಲಿ ಮನವಿ ಮಾಡಿತ್ತು. ಈ ಕಾರಣದಿಂದಾಗಿ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳ ಚುನಾವಣೆಗೆ ವೇಳಾಪಟ್ಟಿ ಅಂತಿಮಗೊಳಿಸುವ ಮುನ್ನ ತನ್ನೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸರ್ಕಾರ ಕೋರಿತ್ತು.

Donate Janashakthi Media

Leave a Reply

Your email address will not be published. Required fields are marked *