ತಿರುವನಂತಪುರ: ಕಳೆದ ಲೋಕಸಭಾ ಚುನಾವಣೆಗೆ ಮುನ್ನ ಕೇರಳದ ತ್ರಿಶ್ಶೂರ್ ಕ್ಷೇತ್ರದಲ್ಲಿ ಬಿಜೆಪಿಯವರು ಸುಮಾರು 30,000 ‘ನಕಲಿ ಮತದಾರರನ್ನು’ ಮತದಾರರ ಪಟ್ಟಿಗೆ ಸೇರಿಸಿರುವ ಮಾಹಿತಿ ಲಭಿಸಿದೆ ಎಂದು ಆಗಸ್ಟ್ 10ರಂದು ಸುದ್ದಿಗಾರರೊಂದಿಗೆ ಮತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ ಆರೋಪಿಸಿದ್ದಾರೆ.
ತ್ರಿಶ್ಶೂರ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸಮೀಪದ ಸ್ಥಳಗಳ ಹಲವು ವ್ಯಕ್ತಿಗಳನ್ನು ಸೇರಿಸಲಾಗಿದೆ ಎಂದು ಹೇಳಲಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಸಂಸ್ಥೆಯ ಸ್ಥಾನಮಾನವನ್ನು ಮರೆತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಸಹಾಯಕನಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕಳೆದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಹೊರಗೆಳೆಯುವ ಕೆಲಸವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ನೀಡಿರುವ ಸಲಹೆಗಳನ್ನು ಪರಿಗಣಿಸದೆ, ತನಗೆ ಬೇಕಾದವರನ್ನು ಚುನಾವಣಾ ಆಯೋಗದ ವಿವಿಧ ಹುದ್ದೆಗಳಿಗೆ ನೇಮಿಸಿದೆ. ಇದೀಗ ಅವರು ‘ಮೋಸದಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಒಂದೆಡೆ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನೆಪದಲ್ಲಿ ಅರ್ಹ ಮತದಾರರ ಹೆಸರನ್ನು ಅಳಿಸುತ್ತಿದ್ದಾರೆ. ಮತ್ತೊಂದೆಡೆ, ಒಂದು ಸ್ಥಳದಲ್ಲಿ ಎರಡು ದಿನಗಳಿಗಿಂತ ಹೆಚ್ಚು ನೆಲಸದೆ ಇರುವವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ’ ಎಂದು ಟೀಕಿಸಿದರು.
ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ ಒಬ್ಬ ವ್ಯಕ್ತಿ ಕನಿಷ್ಠ ಆರು ತಿಂಗಳ ಕಾಲ ಒಂದು ಸ್ಥಳದ ನಿವಾಸಿಯಾಗಿರಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ ಎಂದು ದೂರಿದರು.
ಇದನ್ನೂ ನೋಡಿ: ವಚನಾನುಭವ – 31 | ಅಂಬಿಗರ ಚೌಡಯ್ಯನ ವಚನ – ಕುಲಹೀನ ಶಿಷ್ಯಂಗೆ ಅನುಗ್ರಹವ ಮಾಡಿ Janashakthi Media
