ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ವೇಳೆ ಭಾರಿ ಪ್ರಚಾರ ಪಡೆದಿದ್ದ ‘40% ಕಮಿಷನ್’ ಅವ್ಯವಹಾರ ಪ್ರಕರಣದ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಅವರು, ಶೀಘ್ರವೇ ತನಿಖೆಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಾವೇರಿಯಲ್ಲಿ ಬುಧವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಕರ್ನಾಟಕ ಹೈಕೋರ್ಟ್ ಕೂಡ ಇದನ್ನು ಗಮನಿಸಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ 40% ಕಮಿಷನ್ ಆರೋಪಗಳನ್ನು ತನಿಖೆ ಮಾಡಲು ವಿಳಂಬ ಮಾಡಿದೆ ಎಂದು ಹೇಳಿದ್ದಾರೆ. ಆರು ವಾರಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವಂತೆ ಪ್ರಸ್ತುತ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:ಚುನಾವಣಾ ಬಾಂಡ್‌ಗಳು ರದ್ದು | ಯೋಜನೆ ಅಸಂವಿಧಾನಿಕ ಎಂದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು
”ಕಮಿಷನ್ ನೆಪದಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲು ಕಾಲಾವಕಾಶ ನೀಡುತ್ತಿದ್ದು, ಬೊಕ್ಕಸ ಖಾಲಿಯಾಗಿರುವುದರಿಂದ ಹಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆದೇಶ ನೀಡುವಂತೆ ಒತ್ತಾಯಿಸಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸರ್ಕಾರ ತನ್ನ ಅವಮಾನ ಬದಿಗಿಟ್ಟು ಎಚ್ಚೆತ್ತುಕೊಳ್ಳಬೇಕು” ಎಂದು ಬೊಮ್ಮಾಯಿ ಹೇಳಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡಿರುವ ಕಮಿಷನ್ ಆರೋಪದ ಬಗ್ಗೆ ಮಾಡಿರುವ ಯೂ-ಟರ್ನ್ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕೆಂಪಣ್ಣ ರಾಜ್ಯ ಸರ್ಕಾರದ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. “ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಪ್ರಸ್ತುತ ಸರ್ಕಾರ ಅಭಿವೃದ್ಧಿ ಕಾಣದೆ ನಲುಗುತ್ತಿದೆ” ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರವೂ ರಾಜ್ಯಪಾಲರನ್ನು ಸುಳ್ಳು ಹೇಳುವಂತೆ ಮಾಡಿದೆ ಎಂದು ಬೊಮ್ಮಾಯಿ ಆರೋಪಿಸಿದ್ದು, ತಮ್ಮ ಹಿಂದಿನ ಸರ್ಕಾರ ಮಾಡಿದ ಎಲ್ಲಾ ಒಳ್ಳೆಯ ಕೆಲಸಗಳಿಗೆ ಶ್ರೇಯಸ್ಸು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. “ಕಳೆದ ಎಂಟು ತಿಂಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಹಾನಗಲ್ ಅತ್ಯಾಚಾರ ಪ್ರಕರಣ, ಕಾನೂನು ಸುವ್ಯವಸ್ಥೆ ಕುಸಿತ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು” ಎಂದು ಹೇಳಿದ್ದಾರೆ.
ವಿಡಿಯೊ ನೋಡಿ:ರಾಮನಿಗೆ ಭವ್ಯ ಮಂದಿರ, ಶ್ರಮಿಕರಿಗೆ ಟೆಂಟ್ – ನಾಗೇಶ ಹೆಗಡೆ ವಿಶ್ಲೇಷಣೆ Janashakthi Media