ಹೊಸಪೇಟೆ: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದರು.
ನಂತರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಗಣರಾಜ್ಯೋತ್ಸವ ಕಾರ್ಯಕ್ರಮ ನಿಮಿತ್ತ, ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಷ್ಟ್ರಧ್ವಜ ಹಾರಿಸಿದರು. ಧ್ವಜಾರೋಹಣ ಬಳಿಕ, ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಪಡೆ, ಮಹಿಳಾ ಪೊಲೀಸರು, ಗೃಹರಕ್ಷಕ ದಳ, ವಿಜಯನಗರ ಕಾಲೇಜಿನ ಎನ್‌ಸಿಸಿ ತಂಡ, ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಸಿಸಿ ತಂಡ, ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ನರೇಗಾ ಗ್ರಾಮ ಕಾಯಕ ಪಡೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಥಸಂಚಲನದಲ್ಲಿ ಹೆಜ್ಜೆ ಹಾಕಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು, ನೂತನ ವಿಜಯನಗರ ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಲ್ಲಾ ಖನಿಜ ನಿಧಿಯಿಂದ ₹130 ಕೋಟಿ ಅನುದಾನ ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ವಿಜಯನಗರ ಜಿಲ್ಲೆ ಗತವೈಭವದ ಇತಿಹಾಸ ಹೊಂದಿದೆ. ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಐತಿಹಾಸಿಕ, ಪೌರಾಣಿಕ ಹಿನ್ನೆಲೆಯುಳ್ಳ ನಮ್ಮ ಈ ಜಿಲ್ಲೆಗೆ ರಾಜ್ಯದಲ್ಲಿ ವಿಶೇಷ ಸ್ಥಾನವಿದೆ ಎಂದರು.
ಜನವರಿ 26ರಂದು ಭಾರತದ ಸಂವಿಧಾನ ಜಾರಿಗೆ ಬಂತು. ಇದೇ ದಿನ ಗಣರಾಜ್ಯ ಎಂದು ಘೋಷಿಸಲಾಯಿತು. ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ರಾಷ್ಟ್ರದ ಅಸ್ತಿತ್ವ ಹಾಗೂ ಸಾರ್ವಭೌಮತ್ವವನ್ನು ಸಾರುತ್ತಿವೆ. ಅವುಗಳಿಗೆ ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.