ಮಂಡ್ಯ : ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ರೈತರ ಹಿತ ರಕ್ಷಣಾ ಸಮಿತಿ ಮಂಡ್ಯದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೈಶುಗರ್ ಸಕ್ಕರೆ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟದ ಸುಳಿಗೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ.
ಸರ್ಕಾರಿ ಸ್ವಾಮ್ಯದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ. ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳೇನು ಎಂಬುದನ್ನು ಪತ್ತೆಹಚ್ಚಿ, ಅವುಗಳನ್ನು ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು.
ವಿಧಾನ ಸಭೆಯಲ್ಲಿ ಮೈ ಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ.
ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ ಎಂಬುದು ನನ್ನ ಪ್ರಶ್ನೆ.
ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು.
ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಮತ್ತೆ ರೈತ ಹಿತರಕ್ಷಣಾ ವೇದಿಕೆಯವರು ಪ್ರತಿಭಟನೆ ಮಾಡುತ್ತಿದ್ದಾರೆ.
ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.