ಪಂಚರಾಜ್ಯ ಚುನಾವಣೆ ಮುಂದೂಡಿಕೆಯಿಲ್ಲ, ಜ. 5ಕ್ಕೆ ಮತದಾರರ ಪಟ್ಟಿ ಬಿಡುಗಡೆ

ಲಕ್ನೋ: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ.

ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗುವುದು ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಆ ವದಂತಿಯನ್ನು ಅಲ್ಲಗಳೆದಿರುವ ಸುಶೀಲ್ ಚಂದ್ರ, 2022ರಲ್ಲಿ ನಡೆಯಲಿರುವ ಚುನಾವಣೆಯನ್ನು ಮುಂದೂಡುವುದಿಲ್ಲ. ಎಲ್ಲ ರೀತಿಯ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವ ಮೂಲಕ ಚುನಾವಣೆಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಮ್ಮನ್ನು ಭೇಟಿಯಾಗಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕೊವಿಡ್ ನಿಯಮಾವಳಿಗಳನ್ನು ಅನುಸರಿಸಿ ಈಗಾಗಲೇ ನಿಗದಿಯಾಗಿರುವ ಸಮಯದಲ್ಲೇ ಚುನಾವಣೆಯನ್ನು ನಡೆಸಬೇಕು ಎಂದು ಮನವಿ ಮಾಡಿದ್ದಾರೆ. 80 ವರ್ಷ ಮೇಲ್ಪಟ್ಟ ಮತದಾರರಿಗೆ ಹಾಗೂ ಡಯಾಬಿಟಿಸ್, ಕೊವಿಡ್ ಸೋಂಕು ತಗುಲಿರುವ ಮತದಾರರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ

ಉತ್ತರ ಪ್ರದೇಶಕ್ಕೆ ಮೂರು ದಿನಗಳ ಪ್ರವಾಸದಲ್ಲಿದ್ದ ಚುನಾವಣಾ ಆಯೋಗದ ನಿಯೋಗವು ಮುಂದಿನ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಜಿಲ್ಲಾ ಮತ್ತು ವಿಭಾಗ ಮಟ್ಟದ ಅಧಿಕಾರಿಗಳನ್ನು ನಿನ್ನೆ ಭೇಟಿ ಮಾಡಿತ್ತು. ಅದರ ಬೆನ್ನಲ್ಲೇ ಇಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸುದ್ದಿಗೋಷ್ಠಿ ನಡೆಸಿ, ಚುನಾವಣೆಯ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಚುನಾವಣಾ ಆಯೋಗದ ನಿಯೋಗವು ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಕಮಿಷನರ್‌ಗಳು, ಐಜಿಗಳು, ಡಿಐಜಿಗಳು ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿತು. ಹಾಗೇ, ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಮುಂಬರುವ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿತು” ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *