– ಇಂದು ರೈತರು, ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಭೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಇದರಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ರೈತರ ಜೊತೆ ಇಂದು ಮತ್ತೊಂದು ಸಭೆ ನಡೆಸುತ್ತಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ ನಡುವೆ ಮೊನ್ನೆ (ಡಿಸೆಂಬರ್ 1ರಂದು) ಸಭೆ ನಡೆದಿತ್ತು. ಆ ಸಭೆ ವಿಫಲವಾಗಿದ್ದು ರೈತರು ಪ್ರತಿಭಟನೆಯನ್ನು ಮುಂದುವರೆಸಿರುವುದರಿಂದ ಕೇಂದ್ರ ಸರ್ಕಾರ ಇಂದು ರೈತರ ಜೊತೆಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದೆ.
ಹಿಂದಿನ ಸಭೆಯಲ್ಲಿ ಕೇಂದ್ರ ಸಚಿವರು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಪರಸ್ಪರ ಸಹಕಾರ ಮೂಡದ ಹಿನ್ನೆಲೆಯಲ್ಲಿ ಸಭೆಯನ್ನು ವಿಸರ್ಜಿಸಬೇಕಾಯಿತು.
ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು. ಆದರೆ ಈಗಾಗಲೇ ಒಮ್ಮೆ ಮಾತುಕತೆ ನಡೆದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ದವಿಲ್ಲ ಎಂದು ರೈತ ಪ್ರತಿನಿಧಿಗಳು ಸಭೆಗೆ ಒಪ್ಪಿರಲಿಲ್ಲ. ಕಡೆಗೆ ಪ್ರತಿಭಟನೆ ನಡೆಸುತ್ತಲೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಭೆಯೂ ವಿಫಲವಾಗಿರುವುದರಿಂದ ಇಂದಿನ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.
ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳಗಳಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ದೇಶದ ಬೇರೆ ಬೇರೆ ಭಾಗಗಳಿಂದ ರೈತರು ಸಾಂಕೇತಿಕವಾಗಿ ಭಾಗವಹಿಸಿದ್ದರೆ, ದೆಹಲಿಗೆ ಸಮೀಪ ಇರುವ ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ಬರುವ ರಸ್ತೆಗಳಲ್ಲಿ ರೈತರನ್ನು ತಡೆದಿದ್ದಾರೆ.
ಇಂದಿನ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪದಿದ್ದರೆ ದೇಶಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ರೈತ ಸಂಘಟನೆಗಳು ಹೇಳಿವೆ. ಅಲ್ಲದೆ ಮಹಾರಾಷ್ಟ್ರದಿಂದ ದೆಹಲಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿಯೂ ಎಚ್ಚರಿಸಿವೆ.