ಬೆಂಗಳೂರು :ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದಿತ್ತು. ಇದೀಗ ನಾಗೇಂದ್ರ ತಾನಾಗಿಯೇ ಸಿಎಂ ಸಿದ್ದರಾಮಯ್ಯಗೆ ಕಾವೇರಿ ನಿವಾಸದಲ್ಲಿ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಗೇಂದ್ರ, ನಾನು ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದೇನೆ. ತೀರ್ಪು ಬಂದು ನಾನು ನಿರ್ದೋಷಿ ಅಂತಾ ಸಾಬೀತಾದ ಬಳಿಕ, ಸಿಎಂ ಸಿದ್ದರಾಮಯ್ಯನವರು ನನ್ನನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದಿದ್ದಾರೆ.
ಸರ್ಕಾರಕ್ಕೆ, ವರಿಷ್ಠರಿಗೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ, ನಾನು ರಾಜೀನಾಮೆ ನೀಡಿದ್ದೇನೆ. ಈ ಪ್ರಕರಣದಲ್ಲಿ ನನ್ನ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ನಾನು ರಾಜೀನಾಮೆ ಕೊಡುವ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೂ ಕೂಡ ನಾನು ರಾಜೀನಾಮೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.