ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನಡೆಸುತ್ತಿರುವ ಅನಿರ್ದಿಷ್ಟ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಂಗನವಾಡಿ ನೌಕರರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಆರಂಭಿಸುವ ಎಲ್ ಕೆಜಿ, ಯುಕೆಜಿ‌ ಆದೇಶ ರದ್ದು ಮಾಡುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಸಚಿವರು ಹೇಳಿದರು.

ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಒಂದು ಮಗುವೂ ಅನಾರೋಗ್ಯದಿಂದ ಬಳಲಿ ಅಥವಾ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ಗೃಹಲಕ್ಷ್ಮೀ ಸೇರಿದಂತೆ ನಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ.
ಈ ವೇಳೆ ಸಚಿವರು ಅಂಗನವಾಡಿ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಇರಲಿದೆ ಎಂದು ಹೇಳಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರಿಕರ ಹಾಗೂ ವಿಕಲಾಂಗ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಉಪಾಧ್ಯಕ್ಷರಾದ ಸುನಂದ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

 

Donate Janashakthi Media

Leave a Reply

Your email address will not be published. Required fields are marked *