ಶಿವಮೊಗ್ಗ: ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನ 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ. ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ ವಾರದಲ್ಲಿ ಒಂದು ನೀಡುತ್ತಿದ್ದ ಮೊಟ್ಟೆಯನ್ನು 2 ದಿನಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರದಲ್ಲಿ 6 ದಿನವೂ ಮೊಟ್ಟೆ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಎಸ್.ಮಧು ಬಂಗಾರಪ್ಪ ಹೇಳಿದರು.
2022-23 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಲ್ಯಾಪ್ಯಾನ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಅಂಕ ಮತ್ತು ಶೇ.100 ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿವೆ. ಈ ಬಾರಿ ಜಿಲ್ಲೆ ಎಸ್ಎಸ್ಎಲ್ಸಿ ಯಲ್ಲಿ 3 ನೇ ಸ್ಥಾನಕ್ಕೆ ಏರಿದ್ದು, ಈ ಸಾಧನೆಯನ್ನು ಶಿಕ್ಷಕ ವೃಂದಕ್ಕೆ ಅರ್ಪಿಸುತ್ತೇವೆ. ಗುಣಮಟ್ಟದ ಶಿಕ್ಷಣ ನೀಡಲು ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಉತ್ತಮ ಫಲಿತಾಂಶ ಪಡೆಯಲು ಶಿಕ್ಷಣ ಇಲಾಖೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಹೇಳಿದರು.
ಇದನ್ನೂ ಓದಿ: ತಮಿಳುನಾಡಿಗೆ 1 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸು! ತುರ್ತು ಸಭೆ ಕರೆದ ಸಿಎಂ
ರಾಜ್ಯದಲ್ಲಿ 50,000 ಶಿಕ್ಷಕರ ಕೊರತೆ ಇದೆ. 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಈ ವರ್ಷ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಅನುದಾನಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಈ ವರ್ಷ ರಾಜ್ಯದಲ್ಲಿ 1,600 ಶಾಲೆಗಳ ಕೊಠಡಿಗಳ ದುರಸ್ತಿ ಗುರಿ ಹೊಂದಲಾಗಿದೆ. ಅಗತ್ಯವಿರುವ ಕಡೆ ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ ನೀಡಲಾಗುವುದು. ಹೊಸದಾಗಿ 500 ಕೆಪಿಎಸ್ ಶಾಲೆಗಳನ್ನು ತೆರೆಯಲು ಮೊದಲು ಉದ್ದೇಶಿಸಲಾಗಿತ್ತು. ಈಗ ಅದನ್ನು 1,000ಕ್ಕೆ ಏರಿಸಲಾಗುವುದು. ಕೆಪಿಎಸ್ ಶಾಲೆಯಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವ ಗುರಿ ಹೊಂದಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಸಿದ್ದಬಸಪ್ಪ, ಧರ್ಮಪ್ಪ, ರಾಘವೇಂದ್ರ, ಹರಿಪ್ರಸಾದ್ ಇದ್ದರು.
ಇದನ್ನೂ ನೋಡಿ: 7ನೇ ವೇತನ ಆಯೋಗ ಜಾರಿಗೆ ವಿಳಂಬ ಬೇಡ – ನೌಕರರ ಒಕ್ಕೂಟದ ಎಚ್ಚರಿಕೆ Janashakthi Media