ಬೆಂಗಳೂರು : ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು. ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಇಂದು ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ವಕ್ಫ್ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ, ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಆರೋಪಿಸಿದರು.
ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸುತ್ತೇನೆ. ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಎಚ್ಚರಿಸಿದರು.
ಸಭೆಯ ಪ್ರಮುಖ ಅಂಶಗಳು:
* ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕು.
* ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.
* ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.