ನೂತನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಜೆಗೆ ಪ್ರಮಾಣ ವಚನ ಬೋಧಿಸಿದರು.

ಇದಕ್ಕೂ ಮೊದಲು, 59 ವರ್ಷದ ನ್ಯಾಯಮೂರ್ತಿ ಬಖ್ರು ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ  ಪಾಲ್ಗೊಂಡು, ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು  ಅವರನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನೇಮಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ 5 ನಗರ ಪಾಲಿಕೆ ವಿಭಜನೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ನ್ಯಾ.ವಿಭು ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ.

1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

ನ್ಯಾ.ಬಖ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ.ವಿಭು ಬಖ್ರು ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಇದನ್ನೂ ನೋಡಿ: ಜೀವನಾಂಶ ಅಂದರೇನು? ಅದನ್ನು ಪಡೆಯುವುದು ಹೇಗೆ?Janashakthi Media

Donate Janashakthi Media

Leave a Reply

Your email address will not be published. Required fields are marked *