ತುಮಕೂರು: “ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ನಗರದಲ್ಲಿ ಜನವರಿ 16ರಂದು ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ 2025-26 ಅನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ವಿದ್ಯಾರ್ಥಿ
ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಪಟುವಾಗಿದ್ದೆ
ಕ್ರೀಡೆಯು ಶಿಸ್ತು, ಸಂಯಮ, ಸಮಯಪ್ರಜ್ಞೆ ಪಾಲನೆಗೆ ಸಹಕಾರಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದರು. ವಿದ್ಯಾರ್ಥಿ
ತಾನು ಕೂಡ ವಿದ್ಯಾರ್ಥಿ ದೆಸೆಯಲ್ಲಿ ಕಬಡ್ಡಿ ಪಟುವಾಗಿದ್ದೆ. ಅದರೊಂದಿಗೆ ಫುಟ್ಬಾಲ್, ಕ್ರಿಕೆಟ್ ಕ್ರೀಡೆಯಲ್ಲಿಯೂ ಸಹ ಆಸಕ್ತಿ ಹೊಂದಿದ್ದೆ. ಈಗಲೂ ಏಕದಿನ ಕ್ರಿಕೆಟ್, ಟಿ-20 ಕ್ರಿಕೆಟ್ ವೀಕ್ಷಿಸುವ ಹವ್ಯಾಸ ಉಳಿಸಿಕೊಂಡಿರುವೆ. ತನ್ನ ಕೆಲಸದೊತ್ತಡದ ನಡುವೆ ಈಗಲೂ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸುವುದನ್ನು ತಪ್ಪಿಸುವುದಿಲ್ಲ ಎಂದು ಕ್ರೀಡೆಗಳ ಬಗ್ಗೆ ತಮಗಿದ್ದ ಆಸಕ್ತಿಯನ್ನು ಸಿಎಂ ವ್ಯಕ್ತಪಡಿಸಿದರು. ವಿದ್ಯಾರ್ಥಿ
ಇದನ್ನೂ ಓದಿ: ಮುಸ್ಲಿಂ ಮತ ಅಳಿಸಲು ಬಿಜೆಪಿ ಒತ್ತಡ ಆರೋಪ: ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ – ಬಿಎಲ್‌ಒ ಅಧಿಕಾರಿ
ಸೋಲು ಗೆಲುವುಗಿಂತ ಕ್ರೀಡಾಸ್ಪೂರ್ತಿ ಮುಖ್ಯ
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ. ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ. ಪರಿಶ್ರಮದಿಂದ ಗುರಿ ಸಾಧಿಸಲು ಉತ್ತಮ ತರಬೇತಿ ಅಗತ್ಯ ಎಂದರು.
ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧ
ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ನಿಯಮವನ್ನು ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯ ವರೆಗೆ ಶೇ.3 ರಷ್ಟು ಮೀಸಲಾತಿಯನ್ನು ಸರ್ಕಾರ ನೀಡುತ್ತಿದೆ. ಒಲಿಂಪಿಕ್ಸ್, ಪಾರಾ ಒಲಿಂಪಿಕ್ಸ್, ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ/ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ.
ವಿವಿಧ ಇಲಾಖೆಗಳಲ್ಲಿ ಶೇ.2 ರ ಮೀಸಲಾತಿಯನ್ನು ನೀಡಲಾಗುತ್ತಿದೆ. ಒಲಿಂಪಿಕ್ಸ್ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.
ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ. ತುಮಕೂರು ಜಿಲ್ಲೆಗೆ ಹಾಕಿ ಕ್ರೀಡಾಂಗಣ, ವಿಶ್ವದರ್ಜೆಯ ಈಜುಕೊಳದ ಬೇಡಿಕೆಯಿದ್ದು, ಕ್ರೀಡೆಗಾಗಿ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ನೀಡಿದ ಸಿಎಂ, ಜಿಲ್ಲೆಯಿಂದ ಉತ್ತಮ ಕ್ರೀಡಾಪಟುಗಳು ಹೊರಬಂದು, ವಿಶ್ವಮಟ್ಟದಲ್ಲಿ ನಾಡಿನ ಕೀರ್ತಿಯನ್ನು ಹೆಚ್ಚಿಸಲೆಂದ ಕ್ರೀಡಾಪುಟಗಳಿಗೆ ಶುಭ ಕೋರಿದರು.
ಒಲಿಂಪಿಕ್ಸ್ ನಿಮಿತ್ತ ನಡೆದ ಕ್ರೀಡಾಪಟುಗಳ ಪಥ ಸಂಚಲನ ಗಮನ ಸೆಳೆಯಿತು. ವಿವಿಧ ಜಿಲ್ಲೆಗಳಿಂದ ಬಂದಿದ್ದ ಕ್ರೀಡಾಪಟುಗಳು ಹೆಜ್ಜೆ ಹಾಕಿ ಕ್ರೀಡಾಪ್ರೇಮ ಮೆರೆದರು. ಶಿಸ್ತುಬದ್ಧ ನಡಿಗೆ ಗಮನ ಸೆಳೆಯಿತು. ಪಥ ಸಂಚಲನಕ್ಕೆ ಕಲಾ ತಂಡಗಳು ಕೂಡ ಮತ್ತಷ್ಟು ಮೆರುಗು ತಂದವು.
ಜಿ.ಪರಮೇಶ್ವರ್ ಪೋಸ್ಟ್: ”ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತದ ವತಿಯಿಂದ ಮೊಟ್ಟಮೊದಲ ಬಾರಿಗೆ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2025-26’ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉದ್ಘಾಟಿಸಲಾಯಿತು” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
”ಕರ್ನಾಟಕ ಕ್ರೀಡಾಕೂಟವನ್ನು ನಶೆ ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಯುವಜನತೆಗೆ ಮೀಸಲಾಗಿ ಆಯೋಜಿಸಲಾಗಿದೆ. ಯುವಕರು ಮಾದಕ ವ್ಯಸನಗಳಿಂದ ದೂರವಿದ್ದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ನಮ್ಮ ರಾಜ್ಯದಿಂದ ಏಷ್ಯಾ ಮಟ್ಟದ ಕ್ರೀಡಾಕೂಟಗಳಿಗೆ ಕನಿಷ್ಠ 500 ಕ್ರೀಡಾಪಟುಗಳು ಭಾಗವಹಿಸಬೇಕೆಂಬ ಗುರಿಯಿದೆ. ಎಲ್ಲ ಆಟಗಳಲ್ಲಿ ಗೆಲ್ಲುವುದು ಮುಖ್ಯವಲ್ಲ, ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಮುಖ್ಯ.
ಕ್ರೀಡೆ ವಿದ್ಯಾಭ್ಯಾಸದ ಜೊತೆಗೆ ಯುವಕರ ಜೀವನ ರೂಪಿಸುವ ಶಕ್ತಿಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಸರಿಸಮಾನವಾದ ಸಿಂಥೆಟಿಕ್ ಟ್ರ್ಯಾಕ್, ಕ್ರೀಡಾಪಟುಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಭೂಮಿ ನೀಡಲಾಗಿದೆ. ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ. ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಮತ್ತು ಈಜುಕೊಳ ನಿರ್ಮಿಸಬೇಕಿದೆ. ಇದರ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದೆ” ಎಂದು ಜಿ.ಪರಮೇಶ್ವರ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ನೋಡಿ: ಸಂಕ್ರಾಂತಿ ಕವಿಗೋಷ್ಠಿ | ಕಾವ್ಯಗಳ ಹುಗ್ಗಿಯ ಸಂಭ್ರಮ Janashakthi Media
