ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡೆರೇಷನ್(ಎಐಟಿಯುಸಿ) ವತಿಯಿಂದ ರಾಜ್ಯ ಸರಕಾರದ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ. ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ‘ಬೆಂಗಳೂರು ಚಲೋ’ ನಡೆಸಲಾಯಿತು. ಗೌರವ
ಅಂಗನವಾಡಿಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ 2011ರಿಂದ ನಿವೃತ್ತರಾಗಿರುವ ವಯೋವೃದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚುಟಿ ಜಾರಿಗೊಳಿಸಿ, ಹಾಗೂ ಈಗಾಗಲೇ ಸ್ವಯಂ ನಿವೃತ್ತಿಯಾಗಿರುವವರಿಗೂ ಗ್ರ್ಯಾಚುಟಿ ನೀಡಬೇಕು. ಅಂಗನವಾಡಿ ಕೇಂದ್ರಗಳ ಕೆಲಸಗಳ ಜವಾಬ್ದಾರಿಯೊಂದಿಗೆ ಹೆಚ್ಚುವರಿಯಾಗಿ ಬಿಎಲ್ಒ ಜವಾಬ್ದಾರಿ ಹೊರೆಸುತ್ತಿರುವುದನ್ನು ವಿರೋಧಿಸುವ ಕಾರ್ಯಕರ್ತೆಯರ ಅಮಾನತು ಗೊಳಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆರು, ಸಹಾಯಕಿಯರು ಒತ್ತಾಯಿಸಿದರು.
ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲು ಅವಕಾಶ ಮಾಡಿಕೊಡುತ್ತಿರುವುದರಿಂದ ಅಂಗನವಾಡಿಗಳಿಗೆ ಬರುವ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲ ಆಶಯಗಳು ನಾಶವಾಗುತ್ತಿವೆ. ಆದುದರಿಂದ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಪಾಕಿಸ್ತಾನ ಅಥವಾ ಅಫಘಾನಿಸ್ತಾನ ಆಗಲು ನಿರಾಕರಿಸಿದ ಬಾಂಗ್ಲಾದೇಶ
ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸಿ ಬಡಿಸಲು ತರಕಾರಿ ವೆಚ್ಚ ಕೇವಲ 50 ಪೈಸೆ ರೂ. ಕೊಡುತ್ತಿದ್ದು ಇದನ್ನು ಬೆಲೆ ಏರಿಕೆಗೆ ತಕ್ಕಂತೆ ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಡಿಎ 30ರೂ. ಇರುವುದನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವವರಿಗೂ ವಿಸ್ತರಿಸಬೇಕು. ಮಾತೃವಂದನ, ಭಾಗ್ಯಲಕ್ಷ್ಮೀ ಪ್ರೋ ತ್ಸಾಹ ಧನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಅನುಕಂಪದ ಆಧಾರದಲ್ಲಿ ಕೆಲಸಕ್ಕೆ ನೇಮಕ ಮಾಡುವ ಸಂದರ್ಭದಲ್ಲಿ ವಾಸಸ್ಥಳಕ್ಕೆ ಇರುವ ನಿಯಮವನ್ನು ಸಡಿಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಗೌರವಧನ ಪಡೆದು ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಬಿಪಿಎಲ್ ಪಡಿತರ ಚೀಟಿಯನ್ನು ವಿತರಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದೀರ್ಘಕಾಲ ಒಂದೇ ಜಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು, ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿಯನ್ನು ನಿಯಮಾನುಸಾರ ವರ್ಗಾವಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು ಅವರು ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡೆರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 168 | ವಯಸ್ಕರಿಗೂ ಪ್ರಿಯವಾಗುವ ಮಕ್ಕಳ ಕಿರುಚಿತ್ರ `ದಿ ರೆಡ್ ಬಲೂನ್’ | ಮ ಶ್ರಿ ಮುರಳಿ ಕೃಷ್ಣ
