ಅಹಿಂದ ರಾಜಕಾರಣದ ಸುತ್ತ ಕಾಂಗ್ರೆಸ್ ಒಳಜಗಳ ತೀವ್ರ

ಬೆಂಗಳೂರು: ಕರ್ನಾಟಕದಲ್ಲಿ ಒಕ್ಕಲಿಗರು ಮತ್ತು ಲಿಂಗಾಯತರು ಹೇಗೆ ಪ್ರಮುಖ ಮತಬ್ಯಾಂಕ್ ಆಗಿದ್ದಾರೋ, ಅದೇ ರೀತಿಯಲ್ಲಿ ಅಹಿಂದ ಸಮೂಹವೂ ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ಶಕ್ತಿಯಾಗಿದೆ. ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯಗಳನ್ನು ಒಂದೇ ವೇದಿಕೆಗೆ ತಂದ ಅಹಿಂದ ರಾಜಕೀಯದ ಬೆನ್ನಲ್ಲೇ ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ರಾಜಕಾರಣ

ಇದೀಗ ಅವರ ಬಳಿಕ ಅಹಿಂದ ನಾಯಕತ್ವ ಯಾರಿಗೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಈ ನಡುವೆ ಪಕ್ಷದ ಒಳಜಗಳ ಮತ್ತು ಅಲ್ಪಸಂಖ್ಯಾತ ನಾಯಕರ ಅಸಮಾಧಾನ ಹೊಸ ರಾಜಕೀಯ ಸಮೀಕರಣಗಳಿಗೆ ಕಾರಣವಾಗುತ್ತಿದೆ. ರಾಜಕಾರಣ

ದಾವಣಗೆರೆ ದಕ್ಷಿಣ ಉಪಚುನಾವಣೆ ನಂತರ, ಕಾಂಗ್ರೆಸ್‌ಗೆ ಅಲ್ಪಸಂಖ್ಯಾತ ಸಮುದಾಯದೊಳಗಿನ ಅಸಮಾಧಾನ ಹೆಚ್ಚಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಾಸೀರ್ ಅಹ್ಮದ್ ಅವರನ್ನು ವಜಾಗೊಳಿಸಿರುವುದು ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಅಮಾನತು ಮಾಡಿದ ಕ್ರಮಗಳು ಈ ಅಸಮಾಧಾನಕ್ಕೆ ಕಾರಣವಾಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ಪ್ರಕಾಶಕರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ಯಮುನಾ ಗಾಂವ್ಕರ್ ಆಯ್ಕೆ

ಈ ಬೆಳವಣಿಗೆಗಳ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಾಕಾಂಕ್ಷಿ ಸತೀಶ್ ಜಾರಕಿಹೊಳಿ ಸಕ್ರಿಯರಾಗಿದ್ದು, ಅಲ್ಪಸಂಖ್ಯಾತರ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಅಹಿಂದ ರಾಜಕೀಯವನ್ನು ಮುನ್ನಡೆಸುವ ನಾಯಕನಾಗಿ ತಾವು ಹೊರಹೊಮ್ಮಲು ಯತ್ನಿಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಉಪಚುನಾವಣೆಯ ಫಲಿತಾಂಶದ ನಂತರ ಜಾರಕಿಹೊಳಿ, ಮಹದೇವಪ್ಪ ಮತ್ತು ರಾಜಣ್ಣ ದೆಹಲಿಗೆ ತೆರಳಿ, ಹೈಕಮಾಂಡ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ತೆಗೆದುಕೊಳ್ಳುತ್ತಿರುವ ಕಠಿಣ ಕ್ರಮಗಳಿಂದ ಪಕ್ಷಕ್ಕೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.

ಇದರ ಜೊತೆಗೆ, ಜಮೀರ್ ಅಹ್ಮದ್ ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಆದರೆ ಸಿದ್ದರಾಮಯ್ಯ ಅವರು ಜಮೀರ್‌ಗೆ ತಮ್ಮ ನಿಲುವು ಹೈಕಮಾಂಡ್‌ಗೆ ವಿವರಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಜಾರಕಿಹೊಳಿ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ಸ್ಪರ್ಧೆ ಸ್ಪಷ್ಟವಾಗುತ್ತಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧದ ವರದಿ ಹೈಕಮಾಂಡ್‌ಗೆ ತಲುಪಿಸುವಲ್ಲಿ ಶಿವಕುಮಾರ್ ಬಣದ ಪಾತ್ರವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಸಚಿವ ಕೆ.ಎನ್. ರಾಜಣ್ಣ ಕೂಡ ಪರಿಸ್ಥಿತಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ತಮ್ಮ ಬೆಂಬಲಿಗರನ್ನು ರಕ್ಷಿಸಲು ಇನ್ನಷ್ಟು ಸಕ್ರಿಯರಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ವಲಯದಲ್ಲಿ ಇನ್ನೊಂದು ಕುತೂಹಲಕಾರಿ ಬೆಳವಣಿಗೆಯಾಗಿ, ರಾಜಣ್ಣ ಅವರು ಜೆಡಿಎಸ್ ನಾಯಕರೊಂದಿಗೆ ಸಂಪರ್ಕದಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಭವಿಷ್ಯದ ರಾಜಕೀಯ ಬದಲಾವಣೆಗಳ ಬಗ್ಗೆ ಊಹಾಪೋಹಗಳು ಹೆಚ್ಚಾಗಿವೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಣ್ಣ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ, ಸಚಿವ ಮಹದೇವಪ್ಪ ಅವರು ಸಿದ್ದರಾಮಯ್ಯ ಅವರ ನಾಯಕತ್ವವನ್ನು ಸಮರ್ಥಿಸಿಕೊಂಡು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಅವರಿಗೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: SC ಒಳಮೀಸಲಾತಿ| ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಸಿಪಿಐ(ಎಂ) ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *