ಮಂಗಳೂರು: ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾದ್ಯಂತ ಹೋರಾಟ ಆರಂಭಿಸಿದೆ. ಈ ಸಂಬಂಧ ಮೇ 14ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ವಿವಿಧ ಹಂತದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಒಪ್ಪಿಸುವ ಪ್ರಕ್ರಿಯೆ ಆರಂಭಿಸಿರುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಎಂದು ಆರೋಪಿಸಿದರು.
ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ವಿಟ್ಲ ಸಮುದಾಯ ಆಸ್ಪತ್ರೆ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು ಒಪ್ಪಂದದ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದರು.
“ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿಯವರಿಗೆ ಒಪ್ಪಿಸುವುದು ಆರೋಗ್ಯ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣದ ದಾರಿಗೆ ತಳ್ಳಲಿದೆ. ಇದರಿಂದ ಸಾಮಾನ್ಯ ಜನರು, ಕಡಿಮೆ ಆದಾಯದ ಕುಟುಂಬಗಳು ಮತ್ತು ಕೆಳ ಮಧ್ಯಮ ವರ್ಗದವರು ಆರೋಗ್ಯ ಸೇವೆಯಿಂದ ವಂಚಿತರಾಗುವ ಅಪಾಯ ಇದೆ,” ಎಂದು ಸಿಪಿಐಎಂ ಮುಖಂಡರು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳ ಪ್ರಭಾವ ಹೆಚ್ಚಾಗಿದ್ದು, ದುಬಾರಿ ಚಿಕಿತ್ಸೆಯಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರು, ಔಷಧಿ ಮತ್ತು ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಇದನ್ನೂ ಓದಿ : ಸರಕಾರಿ ಆಸ್ಪತ್ರೆಗಳ ಖಾಸಗೀ ಆಸ್ಪತ್ರೆಗಳಿಗೆ ಕರಾರು ಒಪ್ಪಂದಕ್ಕೆ ಡಿವೈಎಫ್ಐ ವಿರೋಧ
“ಸರಕಾರ ಉದ್ದೇಶಪೂರ್ವಕವಾಗಿ ಸರಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸಿ, ಬಳಿಕ ಖಾಸಗಿಯವರಿಗೆ ಹಸ್ತಾಂತರಿಸಲು ನೆಲಹಾಸು ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳು ಉತ್ತಮ ಸೇವೆ ನೀಡುತ್ತವೆ ಎಂಬ ನೆಪದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಾರ್ಪೊರೇಟ್ ಸಂಸ್ಥೆಗಳ ಹಿಡಿತಕ್ಕೆ ಒಪ್ಪಿಸಲಾಗುತ್ತಿದೆ” ಎಂದು ಟೀಕಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಮರ್ಪಕ ತಾಲೂಕು ಆಸ್ಪತ್ರೆ ಸ್ಥಾಪನೆ, ಜಯದೇವ ಹೃದಯ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಆರಂಭಿಸುವಂತೆ ಜನರಿಂದ ಆಗ್ರಹ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಂತಹ ನಿರ್ಧಾರ ಕೈಗೊಂಡಿರುವುದು ಖಂಡನೀಯ ಎಂದು ಹೇಳಿದರು.
ರಾಜ್ಯ ಸರ್ಕಾರವು ಪಿ.ಪಿ.ಪಿ ಮಾದರಿಯ ಈ ಒಪ್ಪಂದವನ್ನು ತಕ್ಷಣವೇ ರದ್ದುಪಡಿಸಬೇಕು. ವೈದ್ಯರು, ಔಷಧಿ ಮತ್ತು ಅಗತ್ಯ ಸೌಲಭ್ಯಗಳನ್ನು ಸರ್ಕಾರವೇ ಒದಗಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂದು ಸಿಪಿಐಎಂ ಒತ್ತಾಯಿಸಿದೆ.
ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೇ 14ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಪಕ್ಷ ತಿಳಿಸಿದೆ. ಸರ್ಕಾರ ಆದೇಶ ಹಿಂಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿಯೂ ಪ್ರತಿಭಟನೆಗಳನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆ. ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್ ಹಾಗೂ ಸುಕುಮಾರ್ ತೊಕ್ಕೊಟು ಉಪಸ್ಥಿತರಿದ್ದರು.
ವಿಡಿಯೋ ನೋಡಿ : ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ರದ್ದತಿಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ Janashakthi Media
