ಬೆಂಗಳೂರು : ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸಿದೆ. ಪರೀಕ್ಷಾ ವ್ಯವಸ್ಥೆಯಲ್ಲಿನ ನಿರಂತರ ಅಕ್ರಮಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳುತ್ತಿವೆ ಎಂದು ಸಂಘಟನೆ ಆರೋಪಿಸಿದೆ. ನೀಟ್
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ ಹಾಗೂ ಪ್ರಧಾನ ಕಾರ್ಯದರ್ಶಿ ದೇವಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವ್ಯಾಪ್ತಿಯಲ್ಲಿ ಪದೇಪದೇ ಪ್ರಶ್ನೆಪತ್ರಿಕೆ ಸೋರಿಕೆಗಳು ನಡೆಯುತ್ತಿರುವುದು ಭ್ರಷ್ಟ ಮತ್ತು ಸ್ವಾರ್ಥಪರ ಜಾಲಗಳ ಪ್ರಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
“ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಕನಸುಗಳಿಗೆ ಈ ಘಟನೆ ದೊಡ್ಡ ಹೊಡೆತ ನೀಡಿದೆ. ಈಗಾಗಲೇ ಆರ್ಥಿಕ ಮತ್ತು ಮಾನಸಿಕ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಭಾರೀ ಆತಂಕ ಉಂಟಾಗಿದೆ. ಇಂತಹ ಘಟನೆಗಳು ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಂದಿಸುತ್ತಿವೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನೀಟ್
ಪರೀಕ್ಷಾ ವ್ಯವಸ್ಥೆಯ ಕೇಂದ್ರೀಕರಣವೇ ವಿವಿಧ ರಾಜ್ಯಗಳಲ್ಲಿ ಪರೀಕ್ಷಾ ಮಾಫಿಯಾಗಳ ಬೆಳವಣಿಗೆಗೆ ಕಾರಣವಾಗಿದೆ ಎಂದು ಸಂಘಟನೆ ಆರೋಪಿಸಿದೆ. ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಲು ಪರೀಕ್ಷಾ ವ್ಯವಸ್ಥೆಯನ್ನು ವಿಕೇಂದ್ರೀಕರಣ ಮಾಡಬೇಕು ಎಂದು ಆಗ್ರಹಿಸಿದೆ.
ಇದನ್ನೂ ಓದಿ : ವಿದ್ಯಾರ್ಥಿಗಳ ಕನಸ್ಸನ್ನು ವ್ಯಾಪಾರವಾಗಿಸಿರುವ “ಎಗ್ಜಾಮ್ ಮಾಫಿಯಾ”
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟವರಲ್ಲಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಬಿಜೆಪಿ ಯುವ ಘಟಕದ ಸ್ಥಳೀಯ ನಾಯಕ ದಿನೇಶ್ ಬಿವಾಲ್ ಹಾಗೂ ಅವರ ಸಹೋದರ ಮಂಗೀಲಾಲ್ ಬಿವಾಲ್ ಸೇರಿರುವುದನ್ನು ಸಂಘಟನೆ ಉಲ್ಲೇಖಿಸಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಪರೀಕ್ಷೆಗೆ ಮುನ್ನವೇ ವಿವಿಧ ರಾಜ್ಯಗಳಲ್ಲಿ ಹರಡಿದ ಜಾಲದಲ್ಲಿ ಇವರ ಪಾತ್ರವಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದೆ.
ಈ ಪ್ರಕರಣವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಚ್ಚಿಹಾಕಲು ಯತ್ನಿಸಿದ್ದು, ಆರಂಭದಲ್ಲೇ ಪ್ರಕರಣ ದಾಖಲಿಸಲು ವಿಳಂಬ ಮಾಡಲಾಗಿದೆ ಎಂದು ಸಂಘಟನೆ ಆರೋಪಿಸಿದೆ. “ಇದು ಆರೋಪಿಗಳಿಗೆ ರಕ್ಷಣೆ ಒದಗಿಸಿದ ಸ್ಪಷ್ಟ ಉದಾಹರಣೆ” ಎಂದು ಟೀಕಿಸಿದೆ.
ನಿರಂತರ ಪ್ರಶ್ನೆಪತ್ರಿಕೆ ಸೋರಿಕೆಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿನ ವ್ಯವಸ್ಥಾತ್ಮಕ ವೈಫಲ್ಯವನ್ನು ಬಯಲಿಗೆಳೆದಿವೆ. ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ತಕ್ಷಣ ರದ್ದುಪಡಿಸಿ, ಪ್ರವೇಶ ಪರೀಕ್ಷೆಗಳ ಜವಾಬ್ದಾರಿಯನ್ನು ಹಿಂದಿನಂತೆ ಸಂಬಂಧಿತ ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದ ಎಲ್ಲರ ವಿರುದ್ಧ ಕಠಿಣ ಮತ್ತು ಮಾದರಿಯಾಗುವಂತಹ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಟ್ಟುನಿಟ್ಟಿನ ಶಿಕ್ಷೆ ವಿಧಿಸಿದಾಗ ಮಾತ್ರ ಯುವಜನರಲ್ಲಿ ಮತ್ತೆ ವಿಶ್ವಾಸ ಮೂಡಿಸಬಹುದು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಭಿಪ್ರಾಯಪಟ್ಟಿದೆ.
ಇದನ್ನೂ ನೋಡಿ : ಸುಳ್ಳಿನ ಭರವಸೆಗಳು, ಜನರ ಮೇಲಾಗುತ್ತಿರುವ ಬೆಲೆ ಏರಿಕೆಯ ಹೊರೆ | ವಿಶ್ಲೇಷಣೆ – ಟಿ.ಆರ್.ಭಟ್ Janashakthi Media
