ಬಳ್ಳಾರಿ: ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹36 ಸಾವಿರ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಕಾರ್ಮಿಕ ಪರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶನಿವಾರ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಎಚ್. ತಿಪ್ಪಯ್ಯ, ನಿರಂತರ ಬೆಲೆ ಏರಿಕೆಯಿಂದ ಕಾರ್ಮಿಕ ವರ್ಗದ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕಾಗಿದೆ ಎಂದು ಹೇಳಿದರು. ಕಾರ್ಮಿಕರ ಬದುಕು ಭದ್ರವಾಗಬೇಕಾದರೆ ಮಾಸಿಕ ಕನಿಷ್ಠ ₹36 ಸಾವಿರ ವೇತನವನ್ನು ನಿಗದಿಪಡಿಸಿ ಎಲ್ಲ ವರ್ಗದ ಕಾರ್ಮಿಕರಿಗೆ ಅನ್ವಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ಮಲ್ಲಮ್ಮ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ಕುಂಠಿತಗೊಳಿಸುವ ಅಪಾಯವಿದೆ ಎಂದು ಆರೋಪಿಸಿದರು. ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಂಡು ಮಾತ್ರ ಸಂಹಿತೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಕಾರ್ಮಿಕರಿಗೆ ಮಾಸಿಕ ₹36 ಸಾವಿರ ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ಜಿಲ್ಲಾ ಖಜಾಂಚಿ ಬಿ. ಉಮಾ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು, ಸ್ವಚ್ಛತಾ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರು ಸಮರ್ಪಕ ವೇತನ ಮತ್ತು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು. ಖಾಯಂ ಹಾಗೂ ಖಾಯಂಯೇತರ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ನಿವೃತ್ತಿ ಸೌಲಭ್ಯಗಳು ಹಾಗೂ ಗೌರವಯುತ ಬದುಕಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ, ಗುತ್ತಿಗೆ ಕಾರ್ಮಿಕರ ಖಾಯಮಾತಿ, ಸಾಮಾಜಿಕ ಭದ್ರತಾ ಯೋಜನೆಗಳ ವಿಸ್ತರಣೆ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಹಾಗೂ ವಿವಿಧ ವಲಯಗಳ ನೂರಾರು ಕಾರ್ಮಿಕರು ಭಾಗವಹಿಸಿದ್ದರು.
ಇದನ್ನೂ ನೋಡಿ: ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ಸಿಐಟಿಯು ಪ್ರತಿಕ್ರಿಯೆ ಏನು? Janashakthi Media
