ನವದೆಹಲಿ: ಜಾಗತಿಕ ವಾಣಿಜ್ಯಕ್ಕೆ ಅತ್ಯಂತ ಪ್ರಮುಖವಾದ ಹಾರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಹಾರ್ಮುಜ್
ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರಕು ಸಾಗಣೆ ಹಡಗನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಸರ್ಕಾರ
ದಾಳಿಯ ಸ್ವರೂಪ ಹಾಗೂ ಇದರ ಹಿಂದೆ ಯಾರು ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ ಈಗಾಗಲೇ ಉದ್ವಿಗ್ನತೆಯಲ್ಲಿರುವ ಆ ಜಲಪ್ರದೇಶದಲ್ಲಿ ನಡೆದಿರುವ ಈ ಘಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ.
ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ
ಘಟನೆ ತಿಳಿಯುತ್ತಿದ್ದಂತೆಯೇ ಕರಾವಳಿ ರಕ್ಷಣಾ ಪಡೆಗಳು ಹಾಗೂ ಸಂಬಂಧಿತ ಅಧಿಕಾರಿಗಳು ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ದಾಳಿಯಿಂದ ಹಡಗಿಗೆ ಗಂಭೀರ ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಮೃತರಾದ ಭಾರತೀಯ ನಾವಿಕರ ಕುಟುಂಬಗಳಿಗೆ ಮಾಹಿತಿ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಅವರ ಮೃತದೇಹಗಳನ್ನು ಸ್ವದೇಶಕ್ಕೆ ತರಲು ಅಗತ್ಯ ಕ್ರಮಗಳನ್ನು ವೇಗಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
