ಜೈಪುರ ಪ್ರತಿಭಟನೆಯಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಹಲ್ಲೆ; ನಾಲ್ವರು ವಶಕ್ಕೆ

ಜೈಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನಿರುದ್ಯೋಗ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜೈಪುರ

ಶಹೀದ್ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಭಾಗವಹಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಭಿಜೀತ್ ದೀಪ್ಕೆ ಅವರನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತುಕೊಂಡು ಸಾಗುತ್ತಿದ್ದ ವೇಳೆ ಗುಂಪಿನಲ್ಲಿದ್ದ ಕೆಲವರು ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ದೀಪ್ಕೆ ಅವರ ಬೆಂಬಲಿಗರು ಆರೋಪಿಗಳನ್ನು ಹಿಡಿದು ಹಲ್ಲೆ ನಡೆಸಲು ಮುಂದಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಳಿಕ ಇಬ್ಬರು ಯುವಕರನ್ನು ತಕ್ಷಣ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಪೊಲೀಸರ ವಶದಲ್ಲಿರುವ ಆರೋಪಿಗಳಲ್ಲಿ ಒಬ್ಬ, “ಪ್ರಶ್ನೆಪತ್ರಿಕೆ ಸೋರಿಕೆ ಹೆಸರಿನಲ್ಲಿ ಯುವಕರನ್ನು ತಪ್ಪು ದಾರಿಗೆಳೆಯಲಾಗುತ್ತಿದೆ. ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ನಾನು ರಾಷ್ಟ್ರವಾದಿ” ಎಂದು ಹೇಳಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಕಾಕ್ರೋಚ್‌ ಪ್ರತಿಭಟನೆ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಪ್ರಧಾನ್‌ ರಾಜೀನಾಮೆಗೆ ಆಗ್ರಹ

ಘಟನೆಯ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, “ದೈಹಿಕ ದಾಳಿಗಳು ಭಯ ಮತ್ತು ಹೇಡಿತನದ ಸಂಕೇತ. ನಾವು ಶಾಂತಿಯುತವಾಗಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ನಾನು ಗಾಂಧಿ ಮತ್ತು ಅಂಬೇಡ್ಕರ್ ಅವರ ಅನುಯಾಯಿ. ಶಾಂತಿ ಮತ್ತು ಪ್ರೀತಿಯ ಮೂಲಕವೇ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳೂ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರ್ತಿ ತೇಜಸ್ವಿನಿ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ, ಆದರೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಕೇಂದ್ರ ಸಚಿವರು ಹೊಣೆಗಾರರಾಗಿದ್ದು, ಅವರು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನೋರ್ವ ಪ್ರತಿಭಟನಾಕಾರ ಶಿವ್ ಮೀನಾ, ವಿವಿಧ ನೇಮಕಾತಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದರು. ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ನೋಡಿ : ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಮೇಲೆ ಹಲ್ಲೆ Janashakthi Media

Donate Janashakthi Media

Leave a Reply

Your email address will not be published. Required fields are marked *