ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿರುವ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ದೇಶದ ಯುವಕರಿಗೆ ಕೇಂದ್ರ ಸಚಿವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಈ ವಿವಾದ ಉಂಟಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದ್ದು, ಅನೇಕ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಹಕ್ಕುಗಳು, ನ್ಯಾಯಯುತ ಪರೀಕ್ಷಾ ವ್ಯವಸ್ಥೆ ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಅವಹೇಳನಕಾರಿ ಪದಗಳಿಂದ ಸಂಬೋಧಿಸುವುದು ಅಕ್ಷಮ್ಯ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ವೈರಲ್ ‘ಅಪಮಾನ’ ವಿಡಿಯೋ ನಕಲಿ: ಪಂಜಾಬ್ ಸಿಎಂ ಭಗವಂತ್ ಮಾನ್ ಸ್ಪಷ್ಟನೆ
ದೇಶದಲ್ಲಿ ಪದೇ ಪದೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆಯುತ್ತಿರುವುದು ಶಿಕ್ಷಣ ವ್ಯವಸ್ಥೆಯ ಗಂಭೀರ ವೈಫಲ್ಯವನ್ನು ತೋರಿಸುತ್ತದೆ. ಈ ಕುರಿತು ಉತ್ತರ ನೀಡಬೇಕಾದವರು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿರುವುದು ದುರದೃಷ್ಟಕರ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ರೈತರ ಪ್ರತಿಭಟನೆ ವೇಳೆ ರೈತರನ್ನು ‘ವೃತ್ತಿಪರ ಪ್ರತಿಭಟನಾಕಾರರು’ ಎಂದು ಕರೆಯಲಾಗಿತ್ತು. ಸರ್ಕಾರವನ್ನು ಪ್ರಶ್ನಿಸುವವರನ್ನು ‘ದೇಶದ್ರೋಹಿಗಳು’ ಎಂದು ಬಿಂಬಿಸಲಾಗಿತ್ತು. ಈಗ ತಮ್ಮ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವ ಯುವಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವಂತೆ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ನೋಡಿ: ದುಡಿಯುವ ಭೂಮಿ ಕಿತ್ತುಕೊಂಡ ಸರಕಾರ – ಯು.ಬಸವರಾಜ Janashakthi Media
