ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣ: ಅನೀಶ್ ಪೂಜಾರಿ ವಿರುದ್ಧ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪ ಎದುರಿಸುತ್ತಿರುವ ಅನೀಶ್ ಪೂಜಾರಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ ಹಾಗೂ ಪ್ರಧಾನ ಕಾರ್ಯದರ್ಶಿ ದೇವಿ ಅವರು ಜೂನ್‌ 26ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಗಂಜಿಮಠ ನಿವಾಸಿ ಅನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದು, ಬಳಿಕ ಗರ್ಭಿಣಿಯಾಗಿದ್ದ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಇದಲ್ಲದೆ, ಅಶ್ಲೀಲವಾಗಿ ನಿಂದಿಸುವುದು, ಪ್ರಾಣ ಬೆದರಿಕೆ ಹಾಕುವುದು ಸೇರಿದಂತೆ ನಿರಂತರ ಕಿರುಕುಳ ನೀಡಿದ ಪರಿಣಾಮ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: ‘ಕೃಷ್ಣ’ ಹೆಸರಿನ ಕನ್ನಡ ಪಠ್ಯ ಹಿಂಪಡೆಯಿರಿ; ಕನ್ನಡದ ಅಸ್ಮಿತೆಗೆ ಧಕ್ಕೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಇತ್ತೀಚಿನ ದಿನಗಳಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅಥವಾ ಅವರ ಬೆಂಬಲಿಗರ ವಿರುದ್ಧ ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವಂಚನೆ ಮತ್ತು ಶೋಷಣೆಯ ಆರೋಪಗಳು ಹೆಚ್ಚಾಗುತ್ತಿವೆ ಎಂದು ಪ್ರಕಟಣೆಯಲ್ಲಿ ಆರೋಪಿಸಲಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಪುತ್ರನ ವಿರುದ್ಧ ದಾಖಲಾಗಿದ್ದ ಪ್ರಕರಣದ ಬಳಿಕ ಕರಾವಳಿಯಲ್ಲಿ ಇಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಂಘ ಪರಿವಾರ ಹಾಗೂ ಆರ್‌ಎಸ್‌ಎಸ್‌ ನಾಯಕರು ಈ ಪ್ರಕರಣದ ಕುರಿತು ಸ್ಪಷ್ಟನೆ ನೀಡಬೇಕು. ಮಹಿಳೆಯರ ಸುರಕ್ಷತೆ ಕುರಿತು ಘೋಷಣೆಗಳನ್ನು ನೀಡುವ ಕೇಂದ್ರ ಸರ್ಕಾರದ ಆಡಳಿತದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿರುವುದು ಕಳವಳಕಾರಿ ಎಂದು ಸಂಘಟನೆ ಟೀಕಿಸಿದೆ.

ಆರೋಪಿಯ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.

ಇದನ್ನೂ ನೋಡಿ: ಬೀದಿ ವ್ಯಾಪಾರಿಗಳನ್ನು ರಕ್ಷಿಸಿ – ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *