ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 18 ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಪ್ಪಾಡಿಯ ಮೀನಾಕ್ಷಿ ಸೇತುವೆ ಸಮೀಪ ವಯನಾಡು ಟನಲ್ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಈ ಭಾಗದಲ್ಲಿ 265 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಸುರಂಗ ಕಾಮಗಾರಿ ಪ್ರದೇಶದಲ್ಲಿದ್ದ ಕಾಂಕ್ರೀಟ್ ತಡೆಗೋಡೆ ಕುಸಿದು ಮಣ್ಣು ಜಾರಿಬಿದ್ದಿದೆ. ಪರಿಣಾಮ ಕಾಮಗಾರಿ ನಡೆಯುತ್ತಿದ್ದ ಸ್ಥಳವೇ ಮಣ್ಣಿನಡಿ ಮುಚ್ಚಿಹೋಗಿದೆ.
ಮಳೆಯ ತೀವ್ರತೆಯಿಂದಾಗಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲವು ಕಾರ್ಮಿಕರು ಹಾಗೂ ಸಾರ್ವಜನಿಕರು ಇದ್ದರು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ: ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚಿಸಿರುವ ಅವರು, ಕೃಷಿ ಸಚಿವ ಟಿ. ಸಿದ್ದಿಕ್ ಹಾಗೂ ಕಂದಾಯ ಸಚಿವ ಎ.ಪಿ. ಅನಿಲ್‌ಕುಮಾರ್ ಅವರೊಂದಿಗೆ ಸಮನ್ವಯ ಸಾಧಿಸಿದ್ದಾರೆ.
ಮೀನಂಗಡಿಯ ಎನ್‌ಡಿಆರ್‌ಎಫ್ ಘಟಕದ ಜತೆಗೆ ಕೋಝಿಕ್ಕೋಡ್‌ನಿಂದಲೂ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಆದರೆ ಸ್ಥಳದಲ್ಲಿ ನಿರಂತರವಾಗಿ ಮಣ್ಣು ಕುಸಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಕೆಲವು ದಿನಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೇರಳ ಸೇರಿದಂತೆ ಕರಾವಳಿ ಕರ್ನಾಟಕ, ಆಂಧ್ರಪ್ರದೇಶ ಕರಾವಳಿ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ನೋಡಿ: ‘ಜನತಾ ಪ್ರಜಾಪ್ರಭುತ್ವಕ್ಕಾಗಿ ಬದುಕು’: ಕಾರ್ಮಿಕ ಚಳುವಳಿಯ ಹೆಜ್ಜೆಗುರುತು Janashakthi Media
