ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗುತ್ತಿರುವ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಲು ಕೇಂದ್ರದ ಉನ್ನತ ಮಟ್ಟದ ಅಧ್ಯಯನ ತಂಡವನ್ನು ತುರ್ತಾಗಿ ಕರ್ನಾಟಕಕ್ಕೆ ಕಳುಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಹದಗೆಡುತ್ತಿರುವ ಮಳೆ ಕೊರತೆ, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಉಲ್ಲೇಖಿಸಿ ಕೇಂದ್ರದ ತ್ವರಿತ ಮಧ್ಯಸ್ಥಿಕೆಯನ್ನು ಅವರು ಕೋರಿದ್ದಾರೆ.

ಪತ್ರದಲ್ಲಿ, ಜುಲೈ 11ರವರೆಗೆ ರಾಜ್ಯದಲ್ಲಿ ಸಾಮಾನ್ಯವಾಗಿ 292 ಮಿ.ಮೀ. ಮಳೆಯಾಗಬೇಕಿದ್ದರೆ ಕೇವಲ 203 ಮಿ.ಮೀ. ಮಳೆಯಷ್ಟೇ ದಾಖಲಾಗಿದ್ದು, ಶೇ.30ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಹಾಗೂ 240 ತಾಲ್ಲೂಕುಗಳ ಪೈಕಿ 141 ತಾಲ್ಲೂಕುಗಳಲ್ಲಿ ಮಳೆ ಕೊರತೆ ಅಥವಾ ತೀವ್ರ ಮಳೆ ಕೊರತೆ ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ವಿವರಿಸಿದ್ದಾರೆ.

ವಿಳಂಬವಾದ ಮುಂಗಾರು ಹಾಗೂ ಅಸಮರ್ಪಕ ಮಳೆ ಹಂಚಿಕೆಯಿಂದ ಖರೀಫ್ ಬಿತ್ತನೆ ತೀವ್ರವಾಗಿ ಹಿನ್ನಡೆಯಾಗಿದೆ. ಈವರೆಗೆ ಕೇವಲ 28.36 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದ್ದು, ಇದು ನಿಗದಿತ ಗುರಿಯ ಶೇ.34ರಷ್ಟಷ್ಟೇ ಆಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್‌ ನಿನೊ ಪರಿಣಾಮದಿಂದ ಈ ವರ್ಷದ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಸೂಚಿಸಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ : ಫಿಫಾ ವಿಶ್ವಕಪ್‌ 2026: ಫ್ರಾನ್ಸ್‌ಗೆ ಸೋಲು, ಸ್ಪೇನ್‌ ಫೈನಲ್‌ಗೆ

ರಾಜ್ಯದ ಪ್ರಮುಖ ಜಲಾಶಯಗಳಲ್ಲೂ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ. ಜುಲೈ 10ರ ವೇಳೆಗೆ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟು 895.65 ಟಿಎಂಸಿ ಸಾಮರ್ಥ್ಯದ ಎದುರು ಕೇವಲ 303 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಸುಮಾರು ಶೇ.34ರಷ್ಟಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಪರಿಸ್ಥಿತಿ ಕೃಷಿಯಷ್ಟೇ ಅಲ್ಲದೆ ಕುಡಿಯುವ ನೀರಿನ ಪೂರೈಕೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಬರ ನಿರ್ವಹಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭಿಸಿದೆ. ಆದಾಗ್ಯೂ, ಕೇಂದ್ರದ ಅಧ್ಯಯನ ತಂಡ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿದರೆ ಬರ ನಿರ್ವಹಣೆಗೆ ಅಗತ್ಯ ನೆರವು ಮತ್ತು ಪರಿಹಾರ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳಲು ಅನುಕೂಲವಾಗುತ್ತದೆ. ಇದರಿಂದ ರೈತರಲ್ಲಿ ಆತ್ಮವಿಶ್ವಾಸ ಮೂಡಲಿದ್ದು, ಕೇಂದ್ರ ಸರ್ಕಾರ ಅವರೊಂದಿಗೆ ಇದೆ ಎಂಬ ಸಂದೇಶವೂ ರವಾನೆಯಾಗುತ್ತದೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ನೋಡಿ : “ಭೂಗಳ್ಳರ ಸರ್ಕಾರ!” ಜನಾಕ್ರೋಶ ಸಮಾವೇಶದಲ್ಲಿ ಜಿ.ಎನ್. ನಾಗರಾಜರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *