ಎರಡು ತಿಂಗಳಲ್ಲೇ ಬಿರುಕು ಬಿಟ್ಟ ಬಾಸ್ಕೆಟ್‌ಬಾಲ್‌ ಕ್ರೀಡಾಂಗಣ; ಕಳಪೆ ಕಾಮಗಾರಿಗೆ ಕ್ರಮಕ್ಕೆ ಆಗ್ರಹ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮ್ಯಾನ್ಸ್ ಕಾಂಪೌಂಡ್ ಕೆಳಭಾಗದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೂತನ ಬಾಸ್ಕೆಟ್‌ಬಾಲ್‌ ಕ್ರೀಡಾಂಗಣ ನಿರ್ಮಾಣ ಹಂತದಲ್ಲೇ ಕಳಪೆ ಕಾಮಗಾರಿಯಿಂದ ಹಾನಿಗೊಳಗಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಗೌಡ ಒತ್ತಾಯಿಸಿದ್ದಾರೆ. ಬಿರುಕು

ಕೇವಲ ಎರಡು ತಿಂಗಳ ಹಿಂದೆ ನಿರ್ಮಾಣ ಆರಂಭಗೊಂಡಿರುವ ಕ್ರೀಡಾಂಗಣದಲ್ಲಿ ಈಗಾಗಲೇ ಕೆಲವು ಭಾಗಗಳಲ್ಲಿ ನೆಲ ಕುಸಿದಿದ್ದು, ಹಲವೆಡೆ ಬಿರುಕುಗಳು ಕಾಣಿಸಿಕೊಂಡಿವೆ. ಮಳೆ ಬಂದಾಗ ಮೈದಾನದ ಎರಡು ಭಾಗಗಳಿಗೆ ನೀರು ನುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಟಗಾರರಿಗೆ ತೊಂದರೆ ಉಂಟಾಗುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ.

ಕ್ರೀಡಾಂಗಣಕ್ಕೆ ಅಳವಡಿಸಲಾಗಿರುವ ಸುರಕ್ಷತಾ ನೆಟ್‌ನ ಕೆಲವೆಡೆ ವೆಲ್ಡಿಂಗ್ ಕಳಚಿ ಹೋಗುತ್ತಿರುವುದೂ ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷೆಯಿಂದ ಮನನೊಂದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಪ್ರಕರಣ ದಾಖಲು

ಈ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಕಾಮಗಾರಿ ಮೇಲ್ವಿಚಾರಣೆ ನಡೆಸಿದ ಇಂಜಿನಿಯರ್ ವಿರುದ್ಧ ಕಠಿಣ ಕ್ರಮ ಕೈಗೊಂಡು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ರವಿ ಗೌಡ ಆಗ್ರಹಿಸಿದ್ದಾರೆ.

ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲೇ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಇದ್ದರೂ, ಇಷ್ಟೊಂದು ಕಳಪೆ ಕಾಮಗಾರಿ ನಡೆದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಲ್ಲದೆ, ಕಳಪೆ ಕಾಮಗಾರಿಯಿಂದ ಉಂಟಾಗಿರುವ ಎಲ್ಲಾ ದೋಷಗಳನ್ನು ಗುತ್ತಿಗೆದಾರರ ವೆಚ್ಚದಲ್ಲಿಯೇ ಸರಿಪಡಿಸಿ, ಗುಣಮಟ್ಟದ ಕ್ರೀಡಾಂಗಣವನ್ನು ನಿರ್ಮಿಸಿ ಸಾರ್ವಜನಿಕ ಬಳಕೆಗೆ ನೀಡುವಂತೆ ರವಿ ಗೌಡ ಆಗ್ರಹಿಸಿದ್ದಾರೆ.

ಇದನ್ನೂ ನೋಡಿ: “ಭೂಗಳ್ಳರ ಸರ್ಕಾರ!” ಜನಾಕ್ರೋಶ ಸಮಾವೇಶದಲ್ಲಿ ಜಿ.ಎನ್. ನಾಗರಾಜರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *