ಸೋನಂ ವಾಂಗ್‌ಚುಕ್ ಬೆಂಬಲಿಸಿ ಎಸ್‌ಎಫ್‌ಐ ನಾಯಕರ ಅನಿರ್ದಿಷ್ಟಾವಧಿ ಉಪವಾಸ ಆರಂಭ

ನವದೆಹಲಿ: ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಶನಿವಾರ ಬೆಳಗಿನ ಜಾವ ದೆಹಲಿ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದ ಕ್ರಮವನ್ನು ಖಂಡಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್‌ (SFI) ಅಖಿಲ ಭಾರತ ಅಧ್ಯಕ್ಷ ಆದರ್ಶ್ ಎಂ. ಸಾಜಿ ಹಾಗೂ ಅಖಿಲ ಭಾರತ ಜಂಟಿ ಕಾರ್ಯದರ್ಶಿ ಐಷೆ ಘೋಷ್ ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿನ ಅವ್ಯವಸ್ಥೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸೋನಂ ವಾಂಗ್‌ಚುಕ್ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಕಳೆದ ೨೦ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆದರೆ ಶನಿವಾರ ಬೆಳಗಿನ ಜಾವ ಪೊಲೀಸರು ಅವರನ್ನು ಬಲವಂತವಾಗಿ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಕ್ರಮಕ್ಕೆ ದೇಶದಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿವಿಧ ಜನಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ವಾಂಗ್‌ಚುಕ್ ಅವರ ಹೋರಾಟವನ್ನು ಮುಂದುವರಿಸುವ ಸಂಕಲ್ಪದೊಂದಿಗೆ ಆದರ್ಶ್ ಎಂ. ಸಾಜಿ ಮತ್ತು ಐಷೆ ಘೋಷ್ ಉಪವಾಸ ಆರಂಭಿಸಿದ್ದು, ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ : ಸೋನಂ ವಾಂಗ್‌ಚುಕ್‌ ಭಿತ್ತಿಚಿತ್ರ ಬಿಡಿಸಿದ್ದ ಇಬ್ಬರು ಯುವಕರ ಬಂಧನ; ಅಸ್ಸಾಂನಲ್ಲಿ ಆಕ್ರೋಶ

ಭಾರತ ವಿದ್ಯಾರ್ಥಿ ಒಕ್ಕೂಟದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಯ ಮಾತನಾಡಿ, ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಜಂತರ್‌ ಮಂತರ್‌ನಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹಗಳನ್ನು ನಡೆಸಲಿವೆ ಎಂದು ತಿಳಿಸಿದ್ದಾರೆ.

“ಸರ್ಕಾರಕ್ಕೆ ವಿದ್ಯಾರ್ಥಿಗಳ ಹಾಗೂ ಸೋನಂ ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕಿತ್ತು. ಆದರೆ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಹೋರಾಟಗಾರರನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ” ಎಂದು ಅವರು ಟೀಕಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿವೆ. ಶಿಕ್ಷಣ ವ್ಯವಸ್ಥೆಯಲ್ಲಿನ ಈ ವೈಫಲ್ಯಗಳ ವಿರುದ್ಧವೇ ಸೋನಂ ವಾಂಗ್‌ಚುಕ್ ಮತ್ತು ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

“ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದರೆ ಅವರ ಹೋರಾಟದ ಉತ್ಸಾಹವನ್ನು ಕುಗ್ಗಿಸಬಹುದು ಎಂದು ಕೇಂದ್ರ ಸರ್ಕಾರ ಭಾವಿಸಿದೆ. ಆದರೆ ಅದು ತಪ್ಪು ಲೆಕ್ಕಾಚಾರ. ಸೋನಂ ವಾಂಗ್‌ಚುಕ್ ಅವರ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಒಪ್ಪಿಕೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ” ಎಂದು ವಿದ್ಯಾರ್ಥಿ ಒಕ್ಕೂಟದ ನಾಯಕರು ತಿಳಿಸಿದ್ದಾರೆ.

ಇದನ್ನೂ ನೋಡಿ : ಅಭಿಜಿತ್ ದೀಪ್ಕೆ ಮೇಲೆ ಮಸಿ ಎರಚಾಟ; “ನೀಲಿ ನನ್ನ ಬಣ್ಣ… ಜೈ ಭೀಮ್!” ಎಂದು ಪ್ರತಿಕ್ರಿಯೆ Janashakthi Media

Donate Janashakthi Media

Leave a Reply

Your email address will not be published. Required fields are marked *