ನವದೆಹಲಿ: ಕರ್ನಾಟಕದಲ್ಲಿ ಈ ವರ್ಷ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯುವ ಸಾಧ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಈ ಚುನಾವಣೆಗಳನ್ನು ನಡೆಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ
ಸುಪ್ರೀಂ ಕೋರ್ಟ್ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ವಿಚಾರಣೆ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸೇರಿದಂತೆ ಆಡಳಿತಾತ್ಮಕ ಕಾರಣಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ ಎಂದು ಹೇಳಿದರು.
“ಯುವಕರು ಸ್ಥಳೀಯ ಸಂಸ್ಥೆಗಳ ಮೂಲಕ ರಾಜಕೀಯಕ್ಕೆ ಬರಲು ಹೆಚ್ಚಿನ ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ” ಎಂದು ಅವರು ತಿಳಿಸಿದರು. ಚುನಾವಣೆ
ಇದನ್ನೂ ಓದಿ : ಕೃಷ್ಣಾ ಮೇಲ್ದಂಡೆ ಯೋಜನೆಗೆ ಹಣದ ಕೊರತೆ: ಕೇವಲ 3% ಅನುದಾನ ಬಿಡುಗಡೆ
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶ ನೀಡಿದ ಡಿ.ಕೆ. ಶಿವಕುಮಾರ್, “ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಚೇರಿ ನಮ್ಮ ದೇವಾಲಯ. ನಾವು ಈ ಪಕ್ಷದಿಂದಲೇ ಬೆಳೆದಿದ್ದೇವೆ. ಪಕ್ಷ ಸಂಘಟನೆ ಮತ್ತಷ್ಟು ಬಲವಾಗಬೇಕಿದ್ದು, ಯುವ ನಾಯಕರಿಗೆ ಅವಕಾಶ ನೀಡುವ ಕೆಲಸ ಮುಂದುವರಿಯಲಿದೆ” ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪಕ್ಷದ ಹೈಕಮಾಂಡ್ನೊಂದಿಗೆ ಚರ್ಚೆಗಳು ನಡೆಯುತ್ತಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ಇದಕ್ಕೂ ಮುನ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಪಂಚಾಯಿತಿ ಚುನಾವಣೆಗಳು ಈ ವರ್ಷವೇ ನಡೆಯುವ ಸಾಧ್ಯತೆಯನ್ನು ಪ್ರಸ್ತಾಪಿಸಿದ್ದರೆ, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೊಸ ಹೇಳಿಕೆ ಚುನಾವಣೆ ವೇಳಾಪಟ್ಟಿಗೆ ಹೊಸ ಗಡುವು ನೀಡಿದಂತಾಗಿದೆ.
ಇದನ್ನೂ ನೋಡಿ : ಮಫ್ತಿ ಪೊಲೀಸರ ಕಾರ್ಯಾಚರಣೆ! ಸೋನಂ ವಾಂಗ್ಚುಕ್ರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ಕೇಂದ್ರದ ವಿರುದ್ಧ ಆಕ್ರೋಶ
