ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ

ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) [ಸಿಪಿಐ(ಎಂ)] ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ಹಾಗೂ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಸರಕಾರಿ

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ಖಾಸಗೀಕರಣವು ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಕಲ್ಪಿಸಿರುವ ಸಮಾನ ಆರೋಗ್ಯ ಹಕ್ಕಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಅವುಗಳನ್ನು ದುರ್ಬಲಗೊಳಿಸಿ ಖಾಸಗಿ ವಲಯಕ್ಕೆ ಒಪ್ಪಿಸುವ ನೀತಿಯನ್ನು ಸರ್ಕಾರ ಕೈಬಿಡಬೇಕು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಿ ಸರ್ಕಾರಿ ಆಸ್ಪತ್ರೆಗಳನ್ನು ಆಧುನೀಕರಿಸಬೇಕು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಹೃದಯ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ರೋಗಿಗಳು ದೂರದ ನಗರಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಜಿಲ್ಲೆಯಲ್ಲಿ ಜಯದೇವ ಹಾಗೂ ಕಿದ್ವಾಯಿ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸಿದರೆ ಸಾವಿರಾರು ರೋಗಿಗಳಿಗೆ ಅನುಕೂಲವಾಗಲಿದೆ. ವೆನ್ಲಾಕ್ ಆಸ್ಪತ್ರೆಯನ್ನು ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿ ಗುಣಮಟ್ಟದ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದರು. ಸರಕಾರಿ

ಇದನ್ನೂ ನೋಡಿ : ಮಫ್ತಿ ಪೊಲೀಸರ ಕಾರ್ಯಾಚರಣೆ! ಸೋನಂ ವಾಂಗ್‌ಚುಕ್‌ರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆಸ್ಪತ್ರೆಗಳ ಖಾಸಗೀಕರಣದ ಮೂಲಕ ಆರೋಗ್ಯ ಸೇವೆಯನ್ನು ವ್ಯಾಪಾರೀಕರಣಗೊಳಿಸುವ ಪ್ರಯತ್ನವನ್ನು ಜನರು ಒಗ್ಗಟ್ಟಿನಿಂದ ವಿರೋಧಿಸಬೇಕು. ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಯಾವುದೇ ವಿಳಂಬವಿಲ್ಲದೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಸಭೆಯನ್ನು ಸಂತೋಷ್ ಬಜಾಲ್, ಬಿ.ಕೆ. ಇಮ್ತಿಯಾಜ್ ಹಾಗೂ ಪ್ರಮೀಳಾ ಶಕ್ತಿನಗರ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಮುಖಂಡರಾದ ಜಯಂತಿ ಬಿ. ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಯಶವಂತ ಮರೋಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿಭಟನೆಯ ನೇತೃತ್ವವನ್ನು ಶಶಿಧರ ಶಕ್ತಿನಗರ, ಲೋಕೇಶ್ ಎಂ., ದೀಪಕ್ ಬಜಾಲ್, ದಿನೇಶ್ ಶೆಟ್ಟಿ, ಜಯಲಕ್ಷ್ಮಿ ಜಪ್ಪಿನಮೊಗರು, ತಯ್ಯೂಬ್ ಬೆಂಗರೆ, ನಾಗೇಶ್ ಕೋಟ್ಯಾನ್, ಶ್ರೀನಾಥ್ ಕಾಟಿಪಳ್ಳ, ಅಶೋಕ್ ಶ್ರಿಯಾನ್, ರವಿಚಂದ್ರ ಕೊಂಚಾಡಿ, ನವೀನ್ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ, ಆಶಾ ಬೋಳೂರು, ಬಿ.ಕೆ. ಮಕ್ಸೂದ್, ಉದಯಚಂದ್ರ ರೈ, ನೌಶಾದ್ ಬೆಂಗರೆ, ನಾಸಿರ್ ಬೆಂಗರೆ, ಜಗದೀಶ್ ಬಜಾಲ್, ಗೀತಾ ಜಲ್ಲಿಗುಡ್ಡೆ ಹಾಗೂ ಜಯಪ್ರಕಾಶ್ ವಹಿಸಿದ್ದರು.

ಇದನ್ನೂ ಓದಿ : ‘ಚಲೋ ಸಂಸತ್’ ಮೆರವಣಿಗೆ ಉದ್ವಿಗ್ನತೆ: ಲಾಠಿ ಚಾರ್ಜ್, ಭಾರೀ ಭದ್ರತೆ ನಡುವೆ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *