ನವದೆಹಲಿ: ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ಇದನ್ನು “ರಾಷ್ಟ್ರೀಯ ಮಹತ್ವದ ವಿಷಯ” ಹಾಗೂ “ಘೋರ ಪಾಪ” ಎಂದು ಬಣ್ಣಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುವಜನರ ಭವಿಷ್ಯ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಯಾವುದೇ ಪಕ್ಷ ರಾಜಕೀಯದ ದೃಷ್ಟಿಯಿಂದ ನೋಡಬಾರದು. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಮಾಹಿತಿ ದೊರೆತ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ದೇಶದ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇದನ್ನೂ ಓದಿ : ಸೋನಂ ವಾಂಗ್‌ಚುಕ್ ಬಂಧನದ ಬಳಿಕ ವಿದ್ಯಾರ್ಥಿಗಳ ಹೋರಾಟ ತೀವ್ರ; ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಕೆ
ಪ್ರಧಾನಿ ಮೋದಿ, ದೇಶದ ಯುವಜನರು ಆಶಯಗಳಿಂದ ತುಂಬಿದ್ದು, ದೇಶ ಮುನ್ನಡೆಯಬೇಕು ಎಂದು ಬಯಸುತ್ತಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಗದ್ದಲ ಮಾಡುವ ಬದಲು ವಾಸ್ತವಾಂಶಗಳ ಆಧಾರದ ಮೇಲೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳಿಗೆ ಕರೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಂಘಟನೆಗಳು ದೇಶದಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹವೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಈ ಬೆಳವಣಿಗೆಗಳ ಮಧ್ಯೆ ಪ್ರಧಾನಿ ಮೋದಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿರುವುದು ರಾಜಕೀಯ ಹಾಗೂ ಶೈಕ್ಷಣಿಕ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಬಲಪಡಿಸಲು ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವುದಾಗಿ ಸೂಚನೆ ನೀಡಿದೆ.
ಇದನ್ನೂ ನೋಡಿ : ನೀಟ್ ಹಗರಣಕ್ಕೆ ದೇಶಾದ್ಯಂತ ಆಕ್ರೋಶ! ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ Janashakthi Media
