ಹೈದರಾಬಾದ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಅಳಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸಂಚು ರೂಪಿಸಿದೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ಕೊಡಂಗಲ್‌ನಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರೇವಂತ್ ರೆಡ್ಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವ ನೆಪದಲ್ಲಿ ವಿರೋಧ ಪಕ್ಷಗಳ ಬೆಂಬಲಿಗರ ಮತಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದರು.
ಮಹಾರಾಷ್ಟ್ರ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ತಂತ್ರದ ಮೂಲಕ ಬಿಜೆಪಿ ಚುನಾವಣೆಯಲ್ಲಿ ಗೆದ್ದಿದೆ ಎಂದು ರೇವಂತ್ ರೆಡ್ಡಿ ಆರೋಪಿಸಿದರು. ಇದೇ ತಂತ್ರವನ್ನು ಇದೀಗ ತೆಲಂಗಾಣದಲ್ಲೂ ಬಳಸಲು ಬಿಜೆಪಿ ಮುಂದಾಗಿದೆ ಎಂದು ಅವರು ಹೇಳಿದರು. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿದರು.
ತೆಲಂಗಾಣದಲ್ಲಿ 2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಅಳಿಸದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರೇವಂತ್ ರೆಡ್ಡಿ ಸೂಚಿಸಿದರು. ಪ್ರತಿಯೊಬ್ಬ ಬೂತ್ ಮಟ್ಟದ ಕಾರ್ಯಕರ್ತರೂ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಅರ್ಹ ಮತದಾರರ ಹಕ್ಕು ರಕ್ಷಿಸುವಂತೆ ಕರೆ ನೀಡಿದರು.
ಇದನ್ನೂ ಓದಿ : ಸಿಐಟಿಯು ವಿಧಾನಸೌಧ ಚಲೋ: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ 20 ಸಾವಿರ ಕಾರ್ಮಿಕರ ಬೃಹತ್ ಪ್ರತಿಭಟನೆ!
ತೆಲಂಗಾಣದ ಕರಡು ಮತದಾರರ ಪಟ್ಟಿಯಲ್ಲಿ 73.39 ಲಕ್ಷ ಹೆಸರುಗಳನ್ನು ಗೈರು, ಸ್ಥಳಾಂತರಗೊಂಡವರು, ಮೃತಪಟ್ಟವರು ಅಥವಾ ನಕಲಿ ಮತದಾರರು ಎಂಬ ವರ್ಗದಲ್ಲಿ ಹೊರಗಿಡಲಾಗಿದೆ. ಮತ್ತೊಂದು 92.88 ಲಕ್ಷ ಮತದಾರರ ಹೆಸರುಗಳಲ್ಲಿ ವ್ಯತ್ಯಾಸಗಳಿರುವುದಾಗಿ ಗುರುತಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆ ಮತ್ತು ಹಕ್ಕು ಮಂಡಿಸಲು ಸೆಪ್ಟೆಂಬರ್ 16ರವರೆಗೆ ಅವಕಾಶವಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 19ರಂದು ಪ್ರಕಟವಾಗುವ ನಿರೀಕ್ಷೆಯಿದೆ.
ಮತದಾರರ ಹಕ್ಕುಗಳನ್ನು ರಕ್ಷಿಸುವುದು ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಜವಾಬ್ದಾರಿ ಎಂದು ಹೇಳಿದ ರೇವಂತ್ ರೆಡ್ಡಿ, ಪ್ರತಿ ಮಂಡಲ ಮಟ್ಟದ ನಾಯಕರು ನಾಲ್ಕು ಗ್ರಾಮಗಳ ಜವಾಬ್ದಾರಿ ವಹಿಸಿಕೊಂಡು ಮತದಾರರ ಪಟ್ಟಿಯ ಪರಿಷ್ಕರಣೆ ಮೇಲೆ ನಿಗಾ ಇರಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ, ರೇವಂತ್ ರೆಡ್ಡಿ ಅವರ ಆರೋಪಗಳನ್ನು ತೆಲಂಗಾಣ ಬಿಜೆಪಿ ತಿರಸ್ಕರಿಸಿದೆ. ಸಿರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಸರ್ಕಾರವೇ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎನ್. ರಾಮಚಂದರ್ ರಾವ್ ಆರೋಪಿಸಿದ್ದಾರೆ.
ಹೀಗಾಗಿ ತೆಲಂಗಾಣದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಇದೀಗ ಕಾಂಗ್ರೆಸ್–ಬಿಜೆಪಿ ನಡುವಿನ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಇದನ್ನೂ ನೋಡಿ : CITU ನಿಂದ ಕಾರ್ಮಿಕರ ವಿಧಾನಸೌದ ಚಲೋ | ಸೆಪ್ಟೆಂಬರ್ 08, 2026
