ತನಿಖೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವ ಆತಂಕ; ಅ.28ರ ಸಭೆಯಲ್ಲಿ ಏನು ಚರ್ಚೆಯಾಯಿತು ಎಂಬ ಬಗ್ಗೆ ರಾಜ್ಯ ಸರ್ಕಾರ ಮತ್ತು ಎಸ್ಐಟಿ ಮುಖ್ಯಸ್ಥರಿಂದ ಪ್ರಮಾಣಪತ್ರ ಸಲ್ಲಿಸಲು ನಿರ್ದೇಶನ ನೀಡುವಂತೆ ಮನವಿ
ಬೆಂಗಳೂರು: ಸೌಜನ್ಯ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳೊಂದಿಗಿನ ಈ ಭೇಟಿ ನ್ಯಾಯಾಲಯದ ಆದೇಶದಂತೆ ನಡೆಯುತ್ತಿರುವ ತನಿಖೆಯ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತದ ಬಗ್ಗೆ ಅನುಮಾನ ಮೂಡಿಸಿದೆ ಎಂದು ಚಿತ್ರದುರ್ಗದ ಸಾಮಾಜಿಕ ಕಾರ್ಯಕರ್ತೆ ಎನ್. ರಾಮ ನಾಗರಾಜ ಎನ್. ದೂರಿನಲ್ಲಿ ಆಕ್ಷೇಪಿಸಿದ್ದಾರೆ. ಸೌಜನ್ಯ
ಸುಪ್ರೀಂ ಕೋರ್ಟ್ನ ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ಸಲ್ಲಿಸಿರುವ ದೂರಿನಲ್ಲಿ, ಅಕ್ಟೋಬರ್ 28ರಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರು ಎಸ್ಐಟಿ ಮುಖ್ಯಸ್ಥ ಹಾಗೂ ಪೊಲೀಸ್ ಮಹಾನಿರೀಕ್ಷಕ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿರುವುದನ್ನು ಪ್ರಶ್ನಿಸಲಾಗಿದೆ.
ಈ ಭೇಟಿಯ ಸಂದರ್ಭದಲ್ಲಿ ಎಸ್ಐಟಿ ಮುಖ್ಯಸ್ಥರು ಪ್ರಕರಣದ ಕೇಸ್ ಡೈರಿಯನ್ನು ತೆಗೆದುಕೊಂಡು ಹೋಗಿದ್ದರು ಮತ್ತು ತನಿಖೆಯ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ಆರೋಪವನ್ನು ದೂರುದಾರರು ಮಾಡಿದ್ದಾರೆ. ಈ ಕುರಿತು ಟಿವಿ9 ಕನ್ನಡದಲ್ಲಿ ಪ್ರಸಾರವಾದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ. ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಮುಖ್ಯಮಂತ್ರಿಗಳಿಗೆ ಅಥವಾ ಅವರ ಕಚೇರಿಗೆ ನೀಡಲಾಗಿದೆಯೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮೂಲ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗೆ ಅಕ್ಟೋಬರ್ 30ರಂದು ಎಸ್ಐಟಿ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇಂತಹ ಸಂದರ್ಭದಲ್ಲಿ, ವಿಚಾರಣೆಗೆ ಎರಡು ದಿನಗಳ ಮುನ್ನ ಎಸ್ಐಟಿ ಮುಖ್ಯಸ್ಥರು ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವುದು ತನಿಖೆಯ ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂಬುದು ದೂರುದಾರರ ಆಕ್ಷೇಪ.
ಮುಖ್ಯಮಂತ್ರಿಗಳು ತನಿಖೆಯ ಮೇಲೆ ನಿಗಾ ಇಟ್ಟಿದ್ದಾರೆ ಎಂಬ ಭಾವನೆ ತನಿಖಾಧಿಕಾರಿಗಳಲ್ಲಿ ಮೂಡಿದರೂ ಅದು ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಎಸ್ಐಟಿ ಮುಖ್ಯಸ್ಥರು ಸಭೆಗೆ ಹಾಜರಾದುದನ್ನು ತಾವು ತಪ್ಪೆಂದು ಹೇಳುತ್ತಿಲ್ಲ; ಅವರನ್ನು ಸಭೆಗೆ ಕರೆಸಿದ ನಿರ್ಧಾರವೇ ಪ್ರಶ್ನಾರ್ಹ ಎಂಬ ನಿಲುವನ್ನು ದೂರುದಾರರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹಿಂದುಳಿದ ವರ್ಗಗಳ ಕಲ್ಯಾಣದಿಂದ ಬುಡಕಟ್ಟು ಅಭಿವೃದ್ಧಿವರೆಗೆ: 12 ಯೋಜನೆಗಳಿಗೆ ಸಚಿವ ಸಂಪುಟ ಅಸ್ತು!
ರಾಜ್ಯ ಸರ್ಕಾರ, ಎಸ್ಐಟಿ ಮುಖ್ಯಸ್ಥರಿಂದ ಪ್ರಮಾಣಪತ್ರಕ್ಕೆ ಆಗ್ರಹ
ಅಕ್ಟೋಬರ್ 28ರ ಸಭೆಯಲ್ಲಿ ಏನು ನಡೆಯಿತು, ಸಭೆ ಕರೆದವರು ಯಾರು, ತನಿಖೆಯ ಪ್ರಗತಿ ಕುರಿತು ಯಾವುದೇ ವರದಿ ಅಥವಾ ದಾಖಲೆಗಳನ್ನು ಮುಖ್ಯಮಂತ್ರಿಗಳಿಗೆ ಹಂಚಿಕೊಳ್ಳಲಾಗಿದೆಯೇ ಎಂಬುದನ್ನು ವಿವರಿಸಿ ರಾಜ್ಯ ಸರ್ಕಾರ ಮತ್ತು ಎಸ್ಐಟಿ ಮುಖ್ಯಸ್ಥರು ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಮುಖ್ಯಮಂತ್ರಿ, ಸಚಿವರು ಅಥವಾ ಇತರ ರಾಜಕೀಯ ಕಾರ್ಯನಿರ್ವಾಹಕರಿಗೆ ತನಿಖೆಯ ಮಾಹಿತಿ ನೀಡುವುದನ್ನು ಎಸ್ಐಟಿ ನಿಲ್ಲಿಸಬೇಕು. ತನಿಖಾ ವರದಿಗಳನ್ನು ನ್ಯಾಯಾಲಯಕ್ಕೆ ನೇರವಾಗಿ ಮತ್ತು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ನಿರ್ದೇಶಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.
ಇದರ ಜೊತೆಗೆ, ಪ್ರಕರಣದಲ್ಲಿ ಗುರುತಿಸಲಾಗಿರುವ ಸಾಕ್ಷಿಗಳ ರಕ್ಷಣಾ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕು. ಹೊಸದಾಗಿ ಗುರುತಿಸಲ್ಪಡುವ ಸಾಕ್ಷಿಗಳಿಗೂ ಸೂಕ್ತ ಭದ್ರತೆ ಒದಗಿಸಬೇಕು ಎಂದು ದೂರುದಾರರು ಕೋರಿದ್ದಾರೆ.
ಸೆಪ್ಟೆಂಬರ್ 21ರಂದು ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
2012ರ ಅಕ್ಟೋಬರ್ನಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರು, ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ್ದವು. ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದ ಸುಪ್ರೀಂ ಕೋರ್ಟ್, ಸೆಪ್ಟೆಂಬರ್ 21ರಂದು ಹೊಸದಾಗಿ ತನಿಖೆ ನಡೆಸಲು ಆದೇಶಿಸಿತ್ತು.
ಹಿಂದಿನ ತನಿಖೆಗಳಲ್ಲಿ ಭಾಗಿಯಾಗದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ನೈಜ ಆರೋಪಿಗಳು ತನಿಖೆಯನ್ನು ಪ್ರಭಾವಿತಗೊಳಿಸಿರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂಬ ಆತಂಕವನ್ನೂ ನ್ಯಾಯಾಲಯ ವ್ಯಕ್ತಪಡಿಸಿತ್ತು.
ಇದಕ್ಕೂ ಮೊದಲು, ಏಪ್ರಿಲ್ 29, 2026ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ಎಂಟು ಸಂಭಾವ್ಯ ಸಾಕ್ಷಿಗಳನ್ನು ಗುರುತಿಸಲಾಗಿದ್ದು, ಅವರಿಗೆ ರಕ್ಷಣೆ ಒದಗಿಸುವಂತೆ ರಾಜ್ಯಕ್ಕೆ ಸೂಚಿಸಲಾಗಿತ್ತು. ಈ ಸಾಕ್ಷಿಗಳ ಭದ್ರತೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆಯೂ ದೂರಿನಲ್ಲಿ ಕೋರಲಾಗಿದೆ.
ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣದ ಉಲ್ಲೇಖ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ 2020ರಲ್ಲಿ ದಾಖಲಾಗಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಸಿಬಿಐ ಪ್ರಕರಣವನ್ನೂ ದೂರುದಾರರು ಉಲ್ಲೇಖಿಸಿದ್ದಾರೆ. ಈ ಪ್ರಕರಣದಲ್ಲಿ 74.93 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪ ಮಾಡಲಾಗಿತ್ತು. 2023ರ ನವೆಂಬರ್ನಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದ ತನಿಖೆ ರಾಜಕೀಯ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನು ದೂರುದಾರರು ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸೂಕ್ತ ಆದೇಶಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೌಜನ್ಯ ಹೋರಾಟಗಾರರು ಶಾಂತಿಯುತವಾಗಿ ಸುಪ್ರೀಂ ಕೋರ್ಟ್ ಆವರಣದ ಹೊರಗೆ ಸಭೆ ಸೇರಲಿದ್ದಾರೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ನೋಡಿ : ಸೌಜನ್ಯ ಪ್ರಕರಣ | ಹೊಸ ಎಸ್ಐಟಿ ಮೇಲೆ ನಂಬಿಕೆಯಿಲ್ಲ! ನವೀನ್ ಸೂರಿಂಜೆ ಹೀಗೆ ಹೇಳಿದ್ದು ಯಾಕೆ? Janashakthi Media
